ಉದಯವಾಹಿನಿ, ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸೆಗೆ ಪ್ರಧಾನಿ ನರೇಂದ್ರ ಮೋದಿ ತಣ್ಣೀರು ಹಾಕಿದ್ದಾರೆ. ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ ಶೃಂಗಸಭೆಯಲ್ಲಿ ನಾನು ವರ್ಚುಯಲ್ ಆಗಿ ಭಾಗವಹಿಸುತ್ತೇನೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಇದೇ ಅ.26 ರಿಂದ 28 ರವರೆಗೆ ಮಲೇಷ್ಯಾದ ಕೌಲಾಲಂಪುರದಲ್ಲಿ ಆಸಿಯಾನ್ ಶೃಂಗಸಭೆ ಆಯೋಜನೆಗೊಂಡಿದೆ. ಈ ಶೃಂಗಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ ಎನ್ನಲಾಗಿತ್ತು. ಆದರೆ ನರೇಂದ್ರ ಮೋದಿ ಅವರೇ ಈಗ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ನಾನು ವರ್ಚುಯಲ್ ಆಗಿ ಈ ಸಭೆಯಲ್ಲಿ ಭಾಗಿಯಾಗಲಿದ್ದೇನೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.
ಕಳೆದ ತಿಂಗಳು ಟ್ರಂಪ್ ತಮ್ಮ ಟ್ರೂತ್ ಸೋಷಿಯಲ್ ಮೀಡಿಯಾದಲ್ಲಿ, ಮುಂಬರುವ ವಾರಗಳಲ್ಲಿ ಮೋದಿ ಅವರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು. ಈ ಪೋಸ್ಟ್‌ನಿಂದ ಆಸಿಯಾನ್ ಶೃಂಗಸಭೆಯಲ್ಲಿ ಇಬ್ಬರು ನಾಯಕರು ಭೇಟಿಯಾಗಬಹುದು ಎಂಬ ಊಹಾಪೋಹಕ್ಕೆ ಕಾರಣವಾಗಿತ್ತು.ವಿದೇಶಾಂಗ ಸಚಿವ ಎಸ್ ಜೈಶಂಕರ್ ಈ ಶೃಂಗಸಭೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಸಾಧ್ಯತೆಯಿದೆ.
