ಉದಯವಾಹಿನಿ, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಮಂಗಳವಾರ ಅಮಾನವೀಯ ಘಟನೆ ಡೆದಿದೆ. ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೆ, ಅವರನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಲಾಗಿದೆ. ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ, ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿ ಶಾಲೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ನಗ್ನಗೊಳಿಸಿರುವ ಆರೋಪ ಕೇಳಿಬಂದಿದೆ.
ಶಿಕ್ಷಕಿಯ ಕೂಗಾಟ ಕೇಳಿ ಸ್ಥಳಕ್ಕೆ ಧಾವಿಸಿದ ಮನೆಯವರು ಮತ್ತು ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಶಿಕ್ಷಕಿಯನ್ನು ಮೊದಲು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಶಿಕ್ಷಕಿ ಮೇಲೆ ಹಲ್ಲೆ ಮಾಡಿ ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿದ ಘಟನೆ ಸಂಬಂಧ ತನಿಖೆಗೆ ಕೊಪ್ಪ ಡಿವೈಎಸ್‌ಪಿ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಿರುವುದಾಗಿ ಚಿಕ್ಕಮಗಳೂರು ಎಸ್‌ಪಿ ತಿಳಿಸಿದ್ದಾರೆ. ಶಿಕ್ಷಕಿಯ ಸಂಬಂಧಿ ಯುವಕನೊಬ್ಬನಿಂದಲೇ ಈ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
