ಉದಯವಾಹಿನಿ, ಬೆಂಗಳೂರು: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೋಮವಾರ ಬೆಳಗ್ಗೆಯಿಂದ ಜಿಟಿ ಜಿಟಿ ಮಳೆಯಾಗುತ್ತಿದ್ದು, ಸಂಜೆ ವೇಳೆಗೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಎಚ್ಚರಿಕೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು ಜಿಟಿ ಜಿಟಿ ಮಳೆಯಾಗುತ್ತಿದೆ. ಸಂಜೆ ವೇಳೆಗೆ ಮಳೆ ಬಿರುಸು ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೋಮವಾರ ಸಂಜೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹೇಳಿದೆ. ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಇಡೀ ದಿನ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ನಗರದ ಹಲವು ಪ್ರದೇಶಗಳಲ್ಲಿ ಮಧ್ಯಾಹ್ನದ ನಂತರ ಅಲ್ಲಲ್ಲಿ ಮಳೆಯಾಗುತ್ತಿದೆ. ಸಂಜೆ ವೇಳೆಗೆ ಮಳೆ ಇನ್ನಷ್ಟು ಬಿರುಸು ಪಡೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
