ಉದಯವಾಹಿನಿ, ನವದೆಹಲಿ: ವಿಧಾನಸಭೆ ಚುನಾವಣೆಗೂ ಮುನ್ನ ತಮಿಳುನಾಡಿನಲ್ಲಿ ಎಸ್‌ಐಆರ್ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಡಿಎಂಕೆ (DMK) ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ. ಡಿಎಂಕೆ ಪಕ್ಷದ ಪರವಾಗಿ ವಾದಮಂಡಿಸಿದ ಹಿರಿಯ ವಕೀಲ ವಿವೇಕ್ ಸಿಂಗ್ , ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠದ ಮುಂದೆ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ನ್ಯಾಯಾಲಯವು ಮಂಗಳವಾರ (ನ.11) ವಿಚಾರಣೆ ನಡೆಸಲು ಸಮ್ಮತಿ ಸೂಚಿಸಿದೆ.
ಡಿಎಂಕೆಯ ಸಂಘಟನಾ ಕಾರ್ಯದರ್ಶಿ ಆರ್‌ಎಸ್ ಭಾರತಿ ಅವರು ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ಸಂಪೂರ್ಣ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ನ.3ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯಲ್ಲಿ, ಎಸ್‌ಐಆರ್ ಸಂವಿಧಾನಬಾಹಿರ ಮತ್ತು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಉಲ್ಲೇಖಿಸಿದೆ. ಜೊತೆಗೆ ನ.27ರಂದು ಎಸ್‌ಐಆರ್ ನಡೆಸುವ ಚುನಾವಣಾ ಆಯೋಗದ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿದೆ. ಎಸ್‌ಐಆರ್ ಪ್ರಕ್ರಿಯೆಯು ಸಂವಿಧಾನದ 14, 19 ಮತ್ತು 21ನೇ ವಿಧಿಗಳು ಸೇರಿದಂತೆ ಸಂವಿಧಾನದ ಹಲವಾರು ನಿಬಂಧನೆಗಳು ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆಯನ್ನು ಉಲ್ಲಂಘಿಸುತ್ತದೆ ಎಂದು ತಿಳಿಸಿದೆ.
