ಉದಯವಾಹಿನಿ, ಫಿರೋಜ್‌ಪುರ: ಆರ್‌ಎಸ್‌ಎಸ್ ಕಾರ್ಯಕರ್ತ ನವೀನ್ ಅರೋರಾ ಹತ್ಯೆಯಲ್ಲಿ ಭಾಗಿಯಾಗಿದ್ದ ಎನ್ನಲಾದ ಪ್ರಮುಖ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ಫಜಿಲ್ಕಾದಲ್ಲಿ ನಡೆದಿದೆ. ಕಳೆದ ಕೆಲವು ದಿನಗಳ ಹಿಂದೆ ನವೀನ್ ಅರೋರಾ ಎಂಬಾತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಶೂಟರ್ ಬಾದಲ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಬಾದಲ್ ಮತ್ತು ಹೆಡ್ ಕಾನ್‌ಸ್ಟೆಬಲ್ ಇಬ್ಬರಿಗೂ ತೀವ್ರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನವೀನ್ ಅರೋರಾ ಹತ್ಯೆಯ ಬಳಿಕ ತನಿಖೆ ತೀವ್ರಗೊಳಿಸಿರುವ ಪೊಲೀಸರು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ಮತ್ತು ಬಾದಲ್‌ನ ಸಹಚರರನ್ನು ಬಂಧಿಸಲು ಫಜಿಲ್ಕಾದ ಸ್ಮಶಾನಕ್ಕೆ ತೆರಳಿದ್ದರು.
ಈ ವೇಳೆ ಅವರಲ್ಲಿ ಇಬ್ಬರು ಪೊಲೀಸ್ ಪಡೆಗಳನ್ನು ಗುರುತಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಆಗ ಪೊಲೀಸರು ಕೂಡ ಫೈರಿಂಗ್ ನಡೆಸಿದ್ದಾರೆ. ಈ ವೇಳೆ ಎರಡು ಕಡೆಯವರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ಇದರಿಂದ ಬಾದಲ್ ಗಾಯಗೊಂಡರೆ ಪೊಲೀಸ್ ಪಡೆಯಲಿದ್ದ ಹೆಡ್ ಕಾನ್‌ಸ್ಟೆಬಲ್ ವೊಬ್ಬರಿಗೂ ತೀವ್ರ ಗಾಯಗಳಾಗಿವೆ. ಬಳಿಕ ಬಾದಲ್‌ನನ್ನು ಬಂಧಿಸಲಾಗಿದೆ. ಹೆಡ್ ಕಾನ್‌ಸ್ಟೆಬಲ್ ಮತ್ತು ಬಾದಲ್ ನನ್ನು ಚಿಕಿತ್ಸೆಗಾಗಿ ಫಜಿಲ್ಕಾ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
