ಉದಯವಾಹಿನಿ, ಬೆಂಗಳೂರು: ಯುಜಿ ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಮೂರನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ಹೊಸದಾಗಿ ಅರ್ಜಿ ಸಲ್ಲಿಸಲು ಹಾಗೂ ನೀಟ್ ರೋಲ್ ನಂಬರ್ ಲಿಂಕ್ ಮಾಡಿಕೊಳ್ಳಲು (ವೈ ಕ್ಲಾಸ್ ಮಾತ್ರ) ಡಿ.3ರಿಂದ 5ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಯುಜಿ ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಎನ್ ಸಿ ಐ ಎಸ್ ಎಂ, ಡಿ.10ರವರೆಗೆ ಅವಕಾಶ ನೀಡಿರುವ ಕಾರಣ 3ನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಮಾಡಲಾಗುತ್ತಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹೊಸದಾಗಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಡಿ.3ರ ಸಂಜೆ 6ರಿಂದ ಡಿ.5ರ ಮಧ್ಯಾಹ್ನ 1ಗಂಟೆವರೆಗೆ ಅವಕಾಶ ನೀಡಲಾಗಿದೆ. ಡಿ. 5ರ ಸಂಜೆ 6ರ ನಂತರ ತಾತ್ಕಾಲಿಕ ಫಲಿತಾಂಶ ಹಾಗೂ ಡಿ. 6ರ ಮಧ್ಯಾಹ್ನ 2 ಗಂಟೆ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ಡಿ.6ರಿಂದ 9ರವರೆಗೆ ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಸಂಬಂಧಪಟ್ಟ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ.
