ಉದಯವಾಹಿನಿ, ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್ ನೀಡಿದ್ದು, ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಇಂದು (ಡಿ.3) ವಿಚಾರಣೆ ನಡೆಸಿತು. ಈ ವೇಳೆ ಪ್ರಜ್ವಲ್ ಪರ ವಕೀಲ ಸಿದ್ದಾರ್ಥ್ ಲೂಥ್ರಾ ವಾದ ಮಂಡಿಸಿದ್ದು, ಜಾಮೀನು ನೀಡಿದರೂ ಕೂಡ ಪರಾರಿಯಾಗಲ್ಲ. ಇನ್ನುಳಿದ ಎರಡು ಪ್ರಕರಣದ ಟ್ರಯಲ್‌ಗೆ ಸಕಾಲಕ್ಕೆ ಹಾಜರಾಗುತ್ತಾರೆ.
ಹೀಗಾಗಿ ಜಾಮೀನು ನೀಡಬೇಕೆಂದು ಮನವಿ ಮಾಡಿದ್ದರು. ವಾದ ಆಲಿಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ. ಕೆ.ಆರ್ ನಗರದಲ್ಲಿ ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿ, ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಅಮಾನತುಗೊಳಿಸಿ ಜಾಮೀನು ನೀಡುವಂತೆ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು.
