ಉದಯವಾಹಿನಿ, ಕೊಡಗು : ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಕಾಲೇಜಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು, ಶಿಕ್ಷಕರು ಮನಸ್ಸು ಮಾಡಿದ್ದಲ್ಲಿ ವಿದ್ಯಾರ್ಥಿಗಳಲ್ಲಿ ಪರಿಣಾಮಕಾರಿ ಪರಿವರ್ತನೆಯನ್ನು ತರಲು ಸಾಧ್ಯವಿದೆ. ಆ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣವನ್ನು ಸಾಧಿಸಬಹುದಾಗಿದೆ. ಹಾಗೆಯೇ ವಿದ್ಯಾರ್ಥಿಗಳು ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ ಮುಂದೆ ಬರಬೇಕೆಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಕಳೆದ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಯಿತು. ಮತ್ತು ಶೇ.೧೦೦ ರಷ್ಟು ಫಲಿತಾಂಶ ಪಡೆದ ೧೭ ಕಾಲೇಜಿನ ಪ್ರಾಂಶುಪಾಲರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.
ನಂತರ ಪ್ರಾಂಶುಪಾಲರ ಸಂಘದ ವತಿಯಿಂದ ಸೇವೆಯಿಂದ ನಿವೃತ್ತಿಗೊಂಡ ಪ್ರಾಂಶುಪಾಲರಾದ ಸತೀಶ್ ಬಾಬು, ಪುರುಷೋತ್ತಮ, ಜಗದೀಶ್ ಬಾಬು ಹಾಗೂ ಮಾಲತಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪುಟ್ಟರಾಜು ವಹಿಸಿದ್ದರು.
ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಮೂರ್ನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಕ್ಕಿ ಅವರು ಪ್ರಸ್ತಾವಿಕ ಭಾಷಣ ಮಾಡಿದರು. ವೇದಿಕೆಯಲ್ಲಿ ಪ್ರಾಂಶುಪಾಲರ ಸಂಘದ ರಾಜ್ಯ ಪ್ರತಿನಿಧಿ ಮಂದಪ್ಪ, ಪರೀಕ್ಷಾ ಸಂಚಾಲಕಾರದ ಹರೀಶ್ ತಮಾನ್ ಕರ್, ತಾಲ್ಲೂಕು ಉಪಾಧ್ಯಕ್ಷರುಗಳಾದ ಸುಮಂತ್ ಕಿಲಿನ ಹಾಗೂ ಎನ್.ಕೆ. ಪ್ರಭು ಅವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!