ಉದಯವಾಹಿನಿ , ಬೆಳಗಾವಿ : ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಡಿಸೆಂಬರ್ 19 ರವರೆಗೆ ಈ ಅಧಿವೇಶನ ನಡೆಯಲಿದ್ದು, ಕಲಾಪ ಆರಂಭದ ಮೊದಲ ದಿನದ ಮೊದಲಾರ್ಧದಲ್ಲಿ, ಈ ಹಿಂದಿನ ಅವಧಿಯಲ್ಲಿ ನಿಧನ ಹೊಂದಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.ಇದೇ ಸಂದರ್ಭದಲ್ಲಿ, ಸಾಲುಮರದ ತಿಮ್ಮಕ್ಕ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಬೇಲೂರಿನಲ್ಲಿ ಸಾಲುಮರದ ತಿಮ್ಮಕ್ಕ ವಸ್ತು ಸಂಗ್ರಹಾಲಯಕ್ಕೆ ಚಿಂತನೆ ನಡೆಸಲಾಗುತ್ತಿದೆ. ವಸ್ತು ಸಂಗ್ರಹಾಲಯ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ ನೀಡಲು ಕೂಡ ತೀರ್ಮಾನ ಮಾಡಿದ್ದೇವೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಶಿವಸೇನೆ, ಎಂಇಎಸ್ ಪುಂಡಾಟಿಕೆ; ವಿಧಾನಸಭೆ ಚಳಿಗಾಲದ ಅಧಿವೇಶನ ಸಮಯದಲ್ಲಿ ಮಹಾರಾಷ್ಟ್ರದ ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರು ಪುನಃ ಪುಂಡಾಟಿಕೆಗೆ ಮುಂದಾಗಿದ್ದು ಗಡಿಭಾಗದಲ್ಲಿ ಉದ್ವಿಗ್ನತೆ ಹೆಚ್ಚಿಸಿದೆ. ಕೊಲ್ಲಾಪುರದಲ್ಲಿ ಶಿವಸೇನೆ ಪುಂಡರು ರಸ್ತೆಗಿಳಿದು ಕರ್ನಾಟಕ ಸಾರಿಗೆ ಬಸ್ಸುಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಕೊಲ್ಲಾಪುರ ಸೆಂಟ್ರಲ್ ಬಸ್ ಸ್ಟ್ಯಾಂಡ್‌ನಲ್ಲಿ ಶಿವಸೇನೆ ಕಾರ್ಯಕರ್ತರು ಉದ್ಧಟತನಕ್ಕೆ ತೊಡಗಿದ್ದು, ಠಾಕ್ರೆ ಬಣದ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ ದೇವಣೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಈ ನಡುವೆ ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳಕ್ಕೆ ಸಂಬಂಧಿಸಿದ ಉದ್ವಿಗ್ನತೆ ಹೆಚ್ಚಿದ್ದು, ಎಂಇಎಸ್ ಮುಖಂಡ ಮಾಳೋಜಿ ಅಷ್ಟೇಕರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವ್ಯಾಕ್ಸಿಡಿಪೋದ ಮೈದಾನಕ್ಕೆ ಆಗಮಿಸುತ್ತಿದ್ದಂತೆಯೇ ಮಾಜಿ ಮೇಯರ್ ಅಷ್ಟೇಕರ್ ಅವರನ್ನು ವಶಕ್ಕೆ ಪಡೆಯಲಾಗಿದೆ.
