ಉದಯವಾಹಿನಿ, ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲನೇ ಟಿ20ಐ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. 176 ರನ್‌ಗಳ ಗುರಿ ಬೆನ್ನತ್ತಿದ ಪ್ರವಾಸಿ ತಂಡದ ಬ್ಯಾಟರ್‌ಗಳು ಭಾರತದ ಬೌಲರ್‌ಗಳ ಎದುರು ಕುಸಿದಿದ್ದರು. ಭಾರತ ತಂಡದ ಗೆಲುವಿನ ಹೊರತಾಗಿಯೂ ಬ್ಯಾಟಿಂಗ್ ಪ್ರದರ್ಶನದ ಬಗ್ಗೆ ಅಸಮಧಾನವಿದೆ. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬಿಟ್ಟರೆ ಇನ್ನುಳಿದ ಯಾವುದೇ ಬ್ಯಾಟ್ಸ್‌ಮನ್ 30ರ ಗಡಿ ದಾಟಲಿಲ್ಲ. ಅದರಲ್ಲಿಯೂ ನಾಯಕ ಸೂರ್ಯಕುಮಾರ್ ಯಾದವ್ ಅವರು 11ಎಸೆತಗಳಲ್ಲಿ 12 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆ ಮೂಲಕ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಸೂರ್ಯ ಫಾರ್ಮ್‌ಗೆ ಮರಳುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿರುವ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ, “ಅವರು (ಸೂರ್ಯಕುಮಾರ್ ಯಾದವ್) ಖಂಡಿತವಾಗಿಯೂ ಉತ್ತಮ ಆಟಗಾರ ಹಾಗೂ ಮ್ಯಾಚ್ ವಿನ್ನರ್. ಅವರು ಯಾವುದೇ ತಂಡ ಬಯಸುವ ಆಟಗಾರ. ಅವರನ್ನು ಬ್ಯಾಟಿಂಗ್ ಕ್ರಮಾಂಕದಲ್ಲಿ ಮೇಲಕ್ಕೆ ಮತ್ತು ಕೆಳಗೆ ಸರಿಸುವುದು ಅವರಿಗೆ ಸಹಾಯ ಮಾಡುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಅವರು ಏನೇ ಭಾವಿಸಿದರೂ, ಅವರು 3ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಬೇಕು. ಅವರು ಭಾರತಕ್ಕೆ ಶಾಶ್ವತ ಆಟಗಾರನಾಗಿರಬೇಕು, ಕ್ರಮಾಂಕದಲ್ಲಿ ಬದಲಾವಣೆಯಾಗಬಾರದು,” ಎಂದು ಅಭಿಪ್ರಾಯಪಟ್ಟಿದ್ದಾರೆ.
