ಉದಯವಾಹಿನಿ , ಬೆಳಗಾವಿಯ ಪ್ರಭು ಯತ್ನಟ್ಟಿ ಅವರು ಪಿ.ಆರ್.ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ ನಿರ್ಮಿಸುತ್ತಿರುವ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಮಹಾಕವಿ’ ಕನ್ನಡ ಸಿನಿಮಾದ ಚಿತ್ರೀಕರಣವು ಮುಕ್ತಾಯಗೊಂಡಿದೆ. ಈಗ ಚಿತ್ರೀಕರಣೋತ್ತರ ಕೆಲಸಗಳು ನಡೆಯುತ್ತಿವೆ. ‘ಮಹಾಕವಿ’ಯು ಬರಗೂರರ ನಿರ್ದೇಶನದ ಇಪ್ಪತ್ತೈದನೇ ಚಿತ್ರ ಎನ್ನುವುದು ಒಂದು ವಿಶೇಷ.
ಮಹಾಕವಿ’ ಚಿತ್ರವು ಕನ್ನಡದ ಆದಿಕವಿಯೆಂದೇ ಪ್ರಸಿದ್ಧನಾದ ಪಂಪನ ಕಾವ್ಯಗಳನ್ನು ಆಧರಿಸಿದೆ. ಇದು ಪಂಪನ ಜೀವನ ಚರಿತ್ರೆಯಲ್ಲ. ಪಂಪನ ಪರಿಕಲ್ಪನೆಗಳ ದೃಶ್ಯರೂಪಕ. ಅಂದರೆ ಪಂಪ ಮಹಾಕವಿಯು ತನ್ನ ಕಾವ್ಯಗಳಲ್ಲಿ ಪ್ರತಿಪಾದಿಸಿದ ಪರಿಕಲ್ಪನೆಗಳಿಗೆ ಕಥನ ರೂಪ ಕೊಡಲಾಗಿದೆ. ಪಂಪ ಮಹಾಕವಿಯು ರಾಜನ ಆಸ್ಥಾನದಲ್ಲಿದ್ದೂ ಸೃಜನಶೀಲ ಸ್ವಾತಂತ್ರ್ಯವನ್ನ ಸಮರ್ಥಿಸಿಕೊಂಡು ಬರೆದ ಕವಿ. ಪ್ರಭುತ್ವ ಮತ್ತು ಸೃಜನಶೀಲ ಸ್ವಾತಂತ್ರ್ಯವನ್ನ ಕುರಿತ ಪಂಪನ ಪರಿಕಲ್ಪನೆಯು ಇಂದಿಗೂ ಪ್ರಸ್ತುತವಾಗಿದೆ. ಅಂತೆಯೇ ಕನ್ನಡ ಸಾಹಿತ್ಯದಲ್ಲಿ ಜಾತಿ ವ್ಯವಸ್ಥೆಯನ್ನ ವಿರೋಧಿಸಿದ ಮೊಟ್ಟಮೊದಲ ಕವಿ ಪಂಪ. ‘ಆದಿಪುರಾಣ’ದಲ್ಲಿ ‘ಮನುಷ್ಯ ಜಾತಿ ತಾನೊಂದೆ ವಲಂ’ ಎಂದು ಪ್ರತಿಪಾದಿಸಿದ ಪಂಪ, ‘ವಿಕ್ರಮಾರ್ಜುನ ವಿಜಯ’ದಲ್ಲಿ ಕರ್ಣನ ಪಾತ್ರದ ಮೂಲಕ ಜಾತಿ ವ್ಯವಸ್ಥೆಯನ್ನ ವಿರೋಧಿಸಿದ್ದಾನೆ. ‘ಆದಿಪುರಾಣ’ದಲ್ಲಿ ಅಧಿಕಾರದ ಅಹಂಕಾರಕ್ಕೆ ವಿರೋಧ ಒಡ್ಡಿ ಯುದ್ಧದ ಬದಲು ಶಾಂತಿ ಸಂದೇಶ ನೀಡಿದ್ದಾನೆ. ಭೋಗದ ನಶ್ವರತೆಯನ್ನ ಪ್ರತಿಪಾದಿಸಿದ್ದಾನೆ. ಈ ಎಲ್ಲಾ ಪರಿಕಲ್ಪನೆಗಳಿಗೆ ಪ್ರತೀಕವಾಗುವಂತೆ ಈ ಚಿತ್ರವನ್ನು ರೂಪಿಸಲಾಗಿದೆ.
