ಉದಯವಾಹಿನಿ, ಬೆಳಗಾವಿ: ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟಕ್ಕೆ ಕೊಟ್ಟರೆ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು ಯಾವ ಔತಣಕೂಟವೂ ಅಲ್ಲ, ಏನೂ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಹೊರವಲಯದಲ್ಲಿ ಶಾಸಕರ ಜೊತೆ ಔತಣಕೂಟ ಮಾಡಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನ ಕ್ಷೇತ್ರದ ಹುಡುಗನೊಬ್ಬ ಇಲ್ಲಿ ಕೆಲಸ ಮಾಡುತ್ತಿದ್ದಾನೆ. ಆತನ ಮನೆಯಿಂದ ಇವತ್ತು ಮುದ್ದೆ, ಉಪ್ಸಾರು ಊಟ ಮಾಡಿ ಕಳಿಸುತ್ತೇವೆ ಎನ್ನುತ್ತಿದ್ದಾನೆ. ಹೀಗೆ ಅವರು ಪ್ರೀತಿಯಿಂದ ಕರೆದಾಗ ಬೇಡ ಎನ್ನಲು ಆಗುತ್ತದೆಯೇ? ನಾಳಿದ್ದು ನಮ್ಮ ಆಸೀಫ್ ಸೇಠ್, ಫಿರೋಜ್ ಸೇಠ್ ಅವರು ಊಟಕ್ಕೆ ಕರೆದಿದ್ದಾರೆ ಎಂದು ತಿಳಿಸಿದ್ದಾರೆ.
ದೊಡ್ಡಣ್ಣನವರ ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರು ನನ್ನ ಸ್ನೇಹಿತರೂ ಹೌದು. ಅವರದ್ದು ದೊಡ್ಡ ಕುಟುಂಬ. ಕಳೆದ 15 ವರ್ಷಗಳಿಂದ ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಕರೆಯುತ್ತಿದ್ದರು. ನಮ್ಮ ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುತ್ತದೆಯೇ? ಹೀಗಾಗಿ ನಾನೂ ಸೇರಿದಂತೆ ಒಂದಷ್ಟು ಜನರು ಊಟಕ್ಕೆ ಹೋಗಿದ್ದೆವು ಅಷ್ಟೇ. ಅದರಲ್ಲಿ ಯಾವ ಔತಣಕೂಟವು ಇಲ್ಲ, ಏನೂ ಇಲ್ಲ ಎಂದಿದ್ದಾರೆ.
