ಉದಯವಾಹಿನಿ, ಬೆಂಗಳೂರು: ಚಳಿ ಹೆಚ್ಚಾದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ 9 ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಶೀತಗಾಳಿ ಬೀಸಲಿದೆ. ಜನರು ಆದಷ್ಟು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಈ 9 ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದೆ. ಇನ್ನೂ ತಾಪಮಾನ ಕುಸಿಯುವ ಸಾಧ್ಯತೆ ಇದೆ. ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅತಿ ಕಡಿಮೆ ತಾಪಮಾನ ದಾಖಲಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು ಜನ ಜೀವನ ತತ್ತರಗೊಂಡಿದೆ. ಕಳೆದ ಹತ್ತು ವರ್ಷಗಳಲ್ಲಿ ಎರಡನೆಯ ಬಾರಿಗೆ ತಾಪಮಾನ ಕನಿಷ್ಠ ಮಟ್ಟ ತಲುಪಿದೆ. 2023ರಲ್ಲಿ ವಿಜಯಪುರದಲ್ಲಿ 6.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಎರಡೂ ದಿನಗಳ ಕಾಲ ಶೀತಗಾಳಿ ಬೀಸಲಿದ್ದು ವಿಜಯಪುರದಲ್ಲಿ ತಾಪಮಾನ 6 ಡಿಗ್ರಿ ಸೆಲ್ಸಿಯಸ್ಗೆ ಕುಸಿಯುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
