ಉದಯವಾಹಿನಿ, ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 3,600 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯರಾದ ಜಗದೇವ್ ಗುತ್ತೇದಾರ ಪ್ರಶ್ನೆಗೆ ಉತ್ತರ ನೀಡಿದ ಅವರು, ಒಳಮೀಸಲಾತಿ ಪ್ರಕ್ರಿಯೇ ಪೂರ್ವದಲ್ಲೇ ಅಧಿಸೂಚನೆ ಆಗಿದ್ದರಿಂದ ಈಗಾಗಲೇ 947 ಪಿಎಸ್‌ಐಗಳ ಭರ್ತಿ ಪ್ರಕ್ರಿಯೆ ಪೂರ್ಣಗೊಂಡು ಅಭ್ಯರ್ಥಿಗಳು ತರಬೇತಿಯಲ್ಲಿದ್ದಾರೆ. ಒಳಮೀಸಲು ಕಲ್ಪಿಸುವ ಪ್ರಕ್ರಿಯೆ ಪೂರ್ಣವಾಗಿದ್ದರಿಂದ ಈಗ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಚುರುಕುಗೊಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ 167 ಗೃಹರಕ್ಷಕ ದಳದ ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ. ಬಿಜೆಪಿ ಅವಧಿಯಲ್ಲಿ ನೇಮಕಾತಿ ಪ್ರಕ್ರಿಯೆಯೇ ಆಗಿರಲಿಲ್ಲ. ನಮ್ಮ ಸರ್ಕಾರ ಇದನ್ನು ಮಾಡುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಅನುದಾನದಡಿಯಲ್ಲಿ ಕಾಳಗಿ ತಾಲೂಕಿನಲ್ಲಿ ಸಿಪಿಐ ಕಚೇರಿ ಕಟ್ಟಡ ಮತ್ತು ಸಿಪಿಐ ಸಿಬ್ಬಂದಿಗೆ ವಸತಿ ಗೃಹ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಸಚಿವರು ಇದೇ ವೇಳೆ ಸದಸ್ಯರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ.
