ಉದಯವಾಹಿನಿ, ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ನಿಂದ ಇತ್ತೀಚೆಗೆ ಅಮಾನತುಗೊಂಡಿದ್ದ ಶಾಸಕ ಹುಮಾಯೂನ್ ಕಬೀರ್ ಅವರು ಡಿಸೆಂಬರ್ 22ರಂದು ಸ್ವಂತ ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದು, ಮುಂದಿನ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಮುಂದೆ ತಾವು ಯಾವ ಪಕ್ಷದೊಂದಿಗೆ ಮೈತ್ರಿ ಮಾಡಬೇಕು ಎಂಬುದನ್ನು ಕೂಡ ನಿರ್ಧರಿಸುವುದಾಗಿ ತಿಳಿಸಿದ್ದಾರೆ. ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ಕಬೀರ್ ಅವರನ್ನು ಇತ್ತೀಚೆಗೆ ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.
ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ 135 ಸ್ಥಾನಗಳಲ್ಲೂ ಸ್ಪರ್ಧಿಸಲಿದೆ. ಇದಕ್ಕಾಗಿ ಡಿಸೆಂಬರ್ 22ರಂದು ಹೊಸ ರಾಜಕೀಯ ಪಕ್ಷವನ್ನು ಪ್ರಾರಂಭಿಸಲಿದ್ದೇನೆ ಎಂದು ಬುಧವಾರ ಕಬೀರ್ ತಿಳಿಸಿದ್ದಾರೆ.
ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಶ್ಚಿಮ ಬಂಗಾಳ ಘಟಕದೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧರಿಸಿಲ್ಲ ಎಂದಿರುವ ಕಬೀರ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಒಟ್ಟು 249 ಸ್ಥಾನಗಳಲ್ಲಿ 135 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
ಮುಸ್ಲಿಂ ಮತಬ್ಯಾಂಕ್ ಮೇಲೆ ಕಣ್ಣಿಟ್ಟಿರುವ ಕಬೀರ್, 1992ರಲ್ಲಿ ಅಯೋಧ್ಯೆಯಲ್ಲಿ ಕೆಡವಲಾದ 16ನೇ ಶತಮಾನದ ಬಾಬರಿ ಮಸೀದಿಯನ್ನು ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಿರ್ಮಿಸುವುದಾಗಿ ಹೇಳಿ ಇತ್ತೀಚೆಗೆ ಶಿಲಾನ್ಯಾಸ ನೆರವೇರಿಸಿದ್ದರು.ಚುನಾವಣೆ ಹತ್ತಿರುವಿರುವ ಸಮಯದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸರಿಯಲ್ಲ. ತಮ್ಮ ಬೆಂಬಲಿಗರ ಬೇಡಿಕೆಯ ಮೇರೆಗೆ ಡೆಬ್ರಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ತಾವು ರಾಜೀನಾಮೆ ನೀಡುವುದಿಲ್ಲ ಎಂದು ತಿಳಿಸಿದರು.
