ಉದಯವಾಹಿನಿ, ಮೈಸೂರು: ನಗರದ ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಪ್ರವಾಸಿ ತಾಣಗಳಲ್ಲಿ ಮತ್ತಷ್ಟು ಕಟ್ಟೆಚ್ಚರ ವಹಿಸಲಾಗಿದೆ. ಅರಮನೆ ಒಳಗೆ ಶ್ವಾನದಳ, ಸ್ಫೋಟಕ ಪತ್ತೆ ದಳದಿಂದ ತಪಾಸಣೆ ನಡೆಸಲಾಗಿದೆ. ಪ್ರತಿನಿತ್ಯ ಅರಮನೆಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಮೃಗಾಲಯ, ಚಾಮುಂಡಿ ಬೆಟ್ಟ, ಸಂತಫಿಲೋಮಿನಾ ಚರ್ಚ್ ಸೇರಿ ಹಲವೆಡೆ ತಪಾಸಣೆ ನಡೆಸಲಾಗುತ್ತಿದೆ. ಅನುಮಾನಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರಿಗೆ ಪ್ರವಾಸಿಗರು ಆಗಮಿಸುತ್ತಿದ್ದಾರೆ. ದೇಶ ವಿದೇಶದಿಂದಲೂ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಪ್ರವಾಸಿಗರ ಮೇಲೆ ಮೈಸೂರು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಕಟ್ಟೆಚ್ಚರವಹಿಸಲಾಗಿದೆ.
ಡಿ.25ರಂದು ಅರಮನೆಯ ಮುಂಭಾಗ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳಲ್ಲಿ ಚಿಕಿತ್ಸೆ ಫಲಿಸದೇ ಇಬ್ಬರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಈ ಸ್ಫೋಟ ಪ್ರಕರಣವನ್ನು ಎನ್‌ಐಎ ತನಿಖೆ ನಡೆಸುತ್ತಿದೆ.
