ಉದಯವಾಹಿನಿ, ಡೆಹ್ರಾಡೂನ್: ಉತ್ತರಾಖಂಡದ ಅಲ್ಮೋರಾ ಭಿಕಿಯಾಸೈನ್ ಎಂಬಲ್ಲಿ ಬಸ್ ಕಂದಕಕ್ಕೆ ಉರುಳಿ ಏಳು ಜನರು ಸಾವನ್ನಪ್ಪಿದ್ದು, ಸುಮಾರು 12 ಜನರು ಗಾಯಗೊಂಡಿದ್ದಾರೆ. ಬಸ್‌ ಅಲ್ಮೋರಾದ ದ್ವಾರಹತ್ ನಿಂದ ನೈನಿತಾಲ್‌ನ ರಾಮನಗರಕ್ಕೆ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ.
ಬಸ್‌ನಲ್ಲಿ 19 ಪ್ರಯಾಣಿಕರಿದ್ದರು. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದರು. ಚಾಲಕ ಸೇರಿದಂತೆ 12 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಸ್ಥಳದಲ್ಲಿ ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಿಎಂ ಪುಷ್ಕರ್ ಸಿಂಗ್ ಧಾಮಿಯವರು ಈ ಅಪಘಾತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಎಲ್ಲಾ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ದೇವರನ್ನು ಪ್ರಾರ್ಥಿಸುತ್ತೇನೆ. ಇಡೀ ಘಟನೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಮತ್ತು ನಾನು ಸ್ಥಳೀಯ ಆಡಳಿತ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!