ಉದಯವಾಹಿನಿ , ಭೋಪಾಲ್: ಇಂದೋರ್‌ನಲ್ಲಿ ಇತ್ತೀಚೆಗೆ ಕಲುಷಿತ ನೀರು ಸೇವಿಸಿ ಹಲವು ಮಂದಿ ಸಾವನ್ನಪ್ಪಿದ ಪ್ರಕರಣ ಮರುಕಳಿಸದಂತೆ ತಡೆಯಲು ಮಧ್ಯಪ್ರದೇಶದೆಲ್ಲೆಡೆ ಕೈಗೊಂಡ ಕ್ರಮಗಳನ್ನು ವಿವರಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ಆದೇಶಿಸಿದೆ.
ತೊಂದರೆಗೀಡಾದ ಪ್ರದೇಶದ ಸಂತ್ರಸ್ತರಿಗೆ ತುರ್ತು ಪರಿಹಾರ ಕ್ರಮ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮ, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಹೊಣೆಗಾರಿಕೆ ನಿಗದಿ, ತಪ್ಪಿತಸ್ಥರ ವಿರುದ್ಧ ಶಿಸ್ತು ಹಾಗೂ ದಂಡನಾತ್ಮಕ ಕ್ರಮ, ಸಂತ್ರಸ್ತರಿಗೆ ಸೂಕ್ತ ಪರಿಹಾರ, ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವ ಸಂಬಂಧ ಕೈಗೊಂಡ ಕ್ರಮಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿವರಿಸುವಂತೆ ಮುಖ್ಯ ಕಾರ್ಯದರ್ಶಿಯವರಿಗೆ ನ್ಯಾ. ವಿಜಯ್ ಕುಮಾರ್ ಶುಕ್ಲಾ ಮತ್ತು ಅಲೋಕ್ ಅವಸ್ಥಿ ಅವರಿದ್ದ ಪೀಠ ಸೂಚಿಸಿದೆ.
ಮುಂದಿನ ವಿಚಾರಣಾ ದಿನಾಂಕದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ನಾವು ನಿರ್ದೇಶಿಸುತ್ತಿದ್ದೇವೆ. ಇಡೀ ರಾಜ್ಯದಲ್ಲಿ ನೀರು ಕಲುಷಿತಗೊಳ್ಳದಂತೆ ತಡೆಯಲು ಹಾಗೂ ಉಳಿದ ಸ್ಥಳಗಳಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ರಾಜ್ಯಮಟ್ಟದಲ್ಲಿ ಯಾವ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದನ್ನು ಅವರು ಈ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಪೀಠ ಹೇಳಿದೆ.
