ಉದಯವಾಹಿನಿ, ಜೈಪುರ: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಒಂದು ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಇಂದೋರ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಜ.6 ರಂದು ನಡೆದಿದೆ.
IX1240 ವಿಮಾನ ಜೈಪುರದಿಂದ ಬೆಂಗಳೂರಿಗೆ ಹೊರಟಿತ್ತು. ವಿಮಾನ ಹಾರಾಟದಲ್ಲಿದ್ದಾಗ ಒಂದು ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಈ ವೇಳೆ ವಿಮಾನದಲ್ಲಿದ್ದ ವೈದ್ಯರೊಬ್ಬರು ಶಿಶುವಿಗೆ ಸಿಪಿಆರ್ ಮಾಡಿದ್ದರು. ಬಳಿಕ ಚಿಕಿತ್ಸೆಗಾಗಿ ಇಂದೋರ್‌ನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಆಂಬ್ಯುಲೆನ್ಸ್ ಮೂಲಕ ಮಗುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆಯ ಸಮಯದಲ್ಲಿ ಮಗು ಸಾವನ್ನಪ್ಪಿದೆ. ಈ ದುಃಖದ ಸಮಯದಲ್ಲಿ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇವೆ. ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು ತಿಳಿಸಿದ್ದಾರೆ
