ಉಯವಾಹಿನಿ, ಶಿಮ್ಲಾ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪ್ರಪಾತಕ್ಕೆ ಉರುಳಿದ ಪರಿಣಾಮ 8 ಮಂದಿ ಸಾವನ್ನಪ್ಪಿದ ಘಟನೆ ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ನಡೆದಿದೆ. ಬಸ್‌ನಲ್ಲಿ 30 ರಿಂದ 35 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬಹುತೇಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಬಸ್ ಪ್ರಪಾತಕ್ಕೆ ಉರುಳಿದ ಮಾಹಿತಿ ಸಿಗುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಿರ್ಮೌರ್ ಪೊಲೀಸ್ ಎಸ್‌ಪಿ ನಿಶ್ಚಿಂತ್ ಸಿಂಗ್ ನೇಗಿ ಸೇರಿದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಪ್ರಪಾತದಿಂದ ಗಾಯಾಳುಗಳ ಮೇಲಕ್ಕೆ ತಂದು ಆಸ್ಪತ್ರೆ ದಾಖಲಿಸುವ ಪ್ರಯತ್ನ ನಡೆಯುತ್ತಿದೆ. ಈಗಾಗಲೇ 8 ಮಂದಿ ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸಲಾಗುತ್ತಿದೆ ಎಂದು ನಿಶ್ಚಿಂತ್ ಸಿಂಗ್ ನೇಗಿ ತಿಳಿಸಿದ್ದಾರೆ.
