ಉದಯವಾಹಿನಿ , ಹೈದರಾಬಾದ್ : ಗುರುವಾರ ಅಪರಿಚಿತ ವ್ಯಕ್ತಿಗಳು ದೇವಾಲಯವನ್ನು ಧ್ವಂಸ ಮಾಡಿದ ನಂತರ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಆಘಾತಕಾರಿ ಘಟನೆ ಹೈದರಾಬಾದ್‌ನ ಪುರಾನಪುಲ್ ದರ್ವಾಜಾದಲ್ಲಿ ನಡೆದಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಸ್ಥಳದ ಬಳಿ ಜನಸ್ತೋಮ ಸೇರಿದೆ. ಹಾನಿಗೊಂಡ ವಿಚಾರ ತಿಳಿದ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಶೀಘ್ರದಲ್ಲೇ ಸ್ಥಳೀಯರು ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಜಮಾಯಿಸಿದರು. ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.
ಹಿರಿಯ ಪೊಲೀಸ್ ಅಧಿಕಾರಿಗಳು ಪ್ರದೇಶದ ನಿವಾಸಿಗಳ ಬಳಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಹಾನಿಗೊಳಗಾದ ವಿಗ್ರಹದ ಪುನಃಸ್ಥಾಪನೆಯ ಮೇಲ್ವಿಚಾರಣೆ ನಡೆಸಿದರು. ಮುನ್ನೆಚ್ಚರಿಕೆಯ ಕ್ರಮವಾಗಿ ಪುರನಾಪುಲ್ ಮತ್ತು ಸುತ್ತಮುತ್ತ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ಶುಕ್ರವಾರ ಬೆಳಗ್ಗೆ, ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಆ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು. ಅವರು ನಿವಾಸಿಗಳು ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಸಂವಹನ ನಡೆಸಿದರು. ಜನರು ಶಾಂತವಾಗಿರಲು ಮತ್ತು ಅಧಿಕಾರಿಗಳೊಂದಿಗೆ ಸಹಕರಿಸಲು ಮನವಿ ಮಾಡಿದರು. ಶಾಂತಿಯನ್ನು ಕಾಪಾಡಿಕೊಳ್ಳಲು ಕರೆ ನೀಡಿದ ಅವರು ಪೊಲೀಸರು ಪರಿಸ್ಥಿತಿ ನಿರ್ವಹಿಸುತ್ತಿರುವುದಾಗಿ ತಿಳಿಸಿದರು. ವಿಧ್ವಂಸಕ ಕೃತ್ಯದ ಹಿಂದೆ ಯಾರಿದ್ದಾರೆಂದು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಸಾರ್ವಜನಿಕರು ವದಂತಿಗಳನ್ನು ನಂಬಬಾರದು ಅಥವಾ ಹರಡಬಾರದು ಎಂದು ಅಧಿಕಾರಿಗಳು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಆರೋಪಿಸಿದೆ.
