ಉದಯವಾಹಿನಿ, ಬೆಂಗಳೂರು: ಏಕಸದಸ್ಯ ಪೀಠದ ಆದೇಶ ರದ್ದುಗೊಳಿಸಿರುವ ಕರ್ನಾಟಕ ರಾಜ್ಯ ಹೈಕೋರ್ಟ್ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯಾದಂತಾಗಿದೆ. ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನವಾಗಿ ಬಳಸಲು ಅನುಮತಿ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ. ಈ ಹಿಂದೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದನ್ನು ಏಕಸದಸ್ಯ ಪೀಠ ಎತ್ತಿ ಹಿಡಿದಿತ್ತು.
ಈ ಕುರಿತು ಪ್ರಶ್ನಿಸಿರುವ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಶುಕ್ರವಾರ ಆದೇಶವನ್ನು ರದ್ದುಗೊಳಿಸಿ ದ್ವಿಚಕ್ರ ವಾಹನವನ್ನು ಟ್ಯಾಕ್ಸಿಯಾಗಿ ಬಳಸಲು ಅಗತ್ಯ ಷರತ್ತುಗಳನ್ನು ವಿಧಿಸಿ ಸರ್ಕಾರ ಅನುಮತಿ ನೀಡಬಹುದು ಎಂದು ಹೇಳಿದೆ.
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶವನ್ನು ಏಕಸದಸ್ಯ ನ್ಯಾಯಪೀಠವು ಎತ್ತಿ ಹಿಡಿದಿದ್ದು, ಮೋಟಾರು ವಾಹನಗಳ ಕಾಯಿದೆ 1988ರ ಅನ್ವಯ ಮಾರ್ಗಸೂಚಿ ಮತ್ತು ನಿಯಮಗಳನ್ನು ರೂಪಿಸುವವರೆಗೆ ಬೈಕ್ ಟ್ಯಾಕ್ಸಿಗಳು ಕಾರ್ಯಾಚರಣೆ ಮಾಡುವಂತಿಲ್ಲ ಎಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿದ ಓಲಾ, ಉಬರ್, ರ‍್ಯಾಪಿಡೊ ಸೇರಿದಂತೆ ಹಲವು ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸಂಸ್ಥೆಗಳು ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರ ವಿಭಾಗೀಯ ಪೀಠವು ವಿಚಾರಣೆಯನ್ನು ನಡೆಸಿ ಆದೇಶವನ್ನು ಹೊರಡಿಸಿದೆ.
