ಉದಯವಾಹಿನಿ,ಬೆಂಗಳೂರು : ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ಸಲುವಾಗಿಯೇ ಅಕ್ಕ ಪಡೆ ರಚಿಸಲಾಗಿದ್ದು, ಇದು ಪ್ರತಿದಿನ 12 ಗಂಟೆ ಗಸ್ತು ತಿರುಗಲಿದೆ. ದೌರ್ಜನ್ಯಕ್ಕೊಳಗಾಗಿ ದೂರು ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು. ವಿಶೇಷ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ವೇಳೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್‌ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವೆ, ಮಕ್ಕಳ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ದಿನದ 24 ಗಂಟೆಯೂ ಸಹಾಯವಾಣಿಗಳನ್ನು ತೆರೆಯಲಾಗಿದೆ ಎಂದರು.

ಕಳೆದ ವರ್ಷ ನವೆಂಬರ್‌ 28ರಂದು ಅಕ್ಕ ಪಡೆಗೆ ಚಾಲನೆ ನೀಡಲಾಗಿದ್ದು, ಈಗ ಎಲ್ಲೆಡೆ ಗಸ್ತು ತಿರುಗುತ್ತದೆ. ನಮ್ಮ ಇಲಾಖೆಯಿಂದ ಸಹಾಯವಾಣಿ ತೆರೆಯಲಾಗಿದ್ದು, 1098 ಸಂಖ್ಯೆಗೆ ಕರೆ ಮಾಡಬಹುದು. ಅಕ್ಕ ಪಡೆಗೆ ಮಹಿಳಾ ಸಹಾಯವಾಣಿ 181, ಜತೆಗೆ ಪೊಲೀಸ್‌ ಇಲಾಖೆಯ 112 ಸಂಖ್ಯೆಗೆ ಕರೆ ಮಾಡಬಹುದು. ದೌರ್ಜನ್ಯ ತಡೆಗಟ್ಟಲು ಗ್ರಾಮ ಪಂಚಾಯತ್‌ನಿಂದ ಹಿಡಿದು ಮೇಲ್ಮಟ್ಟದವರೆಗೂ ಸಮಿತಿ ರಚಿಸಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಉತ್ತರಿಸಿದರು. ಮಹಿಳೆಯರ ಹಾಗೂ ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ಜವಾಬ್ದಾರಿ ಪ್ರತಿಯೊಬ್ಬರದ್ದು. ಇಲಾಖೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸಾಕಷ್ಟು ಪ್ರಚಾರ ಮಾಡಲಾಗುತ್ತಿದೆ. ಬೀದಿ ನಾಟಕಗಳ ಮೂಲಕ ಜನರನ್ನು ತಲುಪುವ ಕೆಲಸ ಮಾಡಲಾಗುತ್ತಿದೆ, ಆಕಾಶವಾಣಿಯಲ್ಲಿ ಒಂದೂವರೆ ತಿಂಗಳ ಪ್ರಚಾರ ನೀಡಲಾಗಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!