ಉದಯವಾಹಿನಿ, ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿ ರೈಲ್ವೆ ಮೂಲಸೌಕರ್ಯ ವೃದ್ಧಿಸುವ ಹಾಗೂ ರಾಜ್ಯದ ಇನ್ನೂ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಜೊತೆಗೆ ಚರ್ಚೆ ನಡೆಸಿದರು.
ಈಗಾಗಲೇ ರಾಜ್ಯಕ್ಕೆ ಹೈ-ಸ್ಪೀಡ್ ರೈಲು ಕಾರಿಡಾರ್‌ಗಳನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಅದಕ್ಕೆ ಹೆಚ್ಚುವರಿಯಾಗಿ ಬೆಂಗಳೂರು-ಪುಣೆ ಹೈ-ಸ್ಪೀಡ್ ರೈಲು ಕಾರಿಡಾರ್ ನೀಡಲಾಗಿದೆ. ಈ ಮಾರ್ಗವು ಹುಬ್ಬಳ್ಳಿ, ಬೆಳಗಾವಿ ಮೂಲಕ ಹಾದು ಹೋಗಲಿದೆ ಎಂಬುದಾಗಿ ರೈಲ್ವೆ ಸಚಿವರು ತಮಗೆ ತಿಳಿಸಿದರು ಎಂದು ಹೆಚ್‌ಡಿಕೆ ಹೇಳಿದರು.
ಬೆಂಗಳೂರು-ಮುಂಬೈಗೆ ಹೊಸ ರೈಲು ಆರಂಭಿಸಲಾಗುವುದು ಎನ್ನುವ ಮಾಹಿತಿಯನ್ನು ರೈಲ್ವೆ ಸಚಿವರು ತಮಗೆ ಮಾಹಿತಿ ನೀಡಿದರು. ಬೆಂಗಳೂರು-ಪುಣೆ ಹೈ-ಸ್ಪೀಡ್ ರೈಲು ಕಾರಿಡಾರ್ ಹಾಗೂ ಬೆಂಗಳೂರು-ಮುಂಬೈ ನಡುವಿನ ಹೊಸ ರೈಲಿನಿಂದ ಕರ್ನಾಟಕಕ್ಕೆ ಮತ್ತಷ್ಟು ಅನುಕೂಲ ಆಗಲಿದೆ ಎಂದು ಹೆಚ್‌ಡಿಕೆ ತಿಳಿಸಿದರು.
ಹೊಸ ರೈಲು ಸಂಪರ್ಕ ಮತ್ತು ಹಾಲಿ ರೈಲು ಮಾರ್ಗಗಳಲ್ಲಿ ವನ್ಯಜೀವಿಗಳ ಅಪಘಾತಗಳನ್ನು ತಡೆಗಟ್ಟಲು ರೈಲ್ವೆ ಬೇಲಿ ಮತ್ತು ಬ್ಲಾಕ್ ಕಾರಿಡಾರ್‌ಗಳ ಅನುಷ್ಠಾನದ ಕುರಿತು ವಿವರವಾದ ಮಾತುಕತೆ ನಡೆಸಲಾಯಿತು ಎಂದು ಹೇಳಿದರು. ಮಂಡ್ಯ ಲೋಕಸಭೆ ಕ್ಷೇತ್ರವೂ ಸೇರಿದಂತೆ ಕರ್ನಾಟಕದ ಎಲ್ಲಾ ಬಾಕಿ ಇರುವ ರೈಲ್ವೆ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ಒಡೆಯರ್ ಎಕ್ಸ್‌ಪ್ರೆಸ್ ರಾಮನಗರದಲ್ಲಿ ನಿಲುಗಡೆಯನ್ನು ಕೋರಿ ಮನವಿ ಮಾಡಲಾಯಿತು. ಅಲ್ಲದೆ, ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಅನುಕೂಲ ಆಗುವಂತೆ ಮಂಡ್ಯ ಜಿಲ್ಲೆಯಲ್ಲಿ ಸುಧಾರಿತ ಆಧಾರ್ ಸೇವೆಗಳು ಮತ್ತು ಮೂಲಸೌಕರ್ಯಗಳನ್ನು ಒದಗಿಸುವ ಬಗ್ಗೆ ಕೂಡ ರೈಲ್ವೆ ಸಚಿವರಿಗೆ ಮನವರಿಕೆ ಮಾಡಲಾಯಿತು.
