ಉದಯವಾಹಿನಿ, ಬೆಂಗಳೂರು: ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ ಕೂಡಲೇ ಕ್ರಮ ವಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್‌ ಶಾಸಕ ದಿನೇಶ್‌ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಈ ವಿಚಾರವಾಗಿ ಮನವಿ ಸಲ್ಲಿಸಿದ್ದರು. ಅದಕ್ಕೆ ಸಿಎಂ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಈ ಬಗ್ಗೆ ಪರಿಶೀಲನೆ ಮಾಡಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ರಾಜ್ಯಾದ್ಯಂತ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯಡಿ 2023 ರ ಜೂನ್ ತಿಂಗಳಿನಿಂದ ಸರ್ಕಾರದ ಆದೇಶದನ್ವಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಮಾಸಿಕ 2 ಸಾವಿರ ರೂ. ಪಾವತಿಸಲಾಗುತ್ತಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಯೋಜನೆಯ ಫಲಾನುಭವಿ ಮಹಿಳೆಯಾಗಿರುತ್ತಾರೆ. ಗೃಹಲಕ್ಷ್ಮಿ ಯೋಜನೆಯಡಿ 1,24,12,543 ಅರ್ಹ ಫಲಾನುಭವಿಗಳಿಗೆ ಈವರೆಗೂ ಸುಮಾರು 57,300 ಕೋಟಿ ರೂ.ಗಳ ಆರ್ಥಿಕ ಸಹಾಯವನ್ನು ಪಾವತಿ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!