ಉದಯವಾಹಿನಿ, ಬೆಂಗಳೂರು: ಐಪಿಸಿ ಸೆಕ್ಷನ್ 498ಎ (ವರದಕ್ಷಿಣೆ ಕಿರುಕುಳ) ಕುಟುಂಬದ ಸದಸ್ಯರ ನಡುವಿನ ವಿವಾದಗಳಿಗೆ ಸಂಬಂಧಿಸಿದ್ದಾಗಿದ್ದು, ಪತಿಯ ಪ್ರಿಯತಮೆಯನ್ನು ವರದಕ್ಷಿಣೆ ಕಿರುಕುಳ ಆರೋಪದಲ್ಲಿ ವಿಚಾರಣೆಗೆ ಒಳಪಡಿಸಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಮಹಿಳೆಯೊಬ್ಬರ ವಿರುದ್ಧದ ವಿಚಾರಣಾ ಪ್ರಕ್ರಿಯೆಯನ್ನು ರದ್ದುಪಡಿಸಿದೆ.
ತನ್ನ ವಿರುದ್ಧ ಮೈಸೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೊರಿ ಮಹಿಳೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಈ ಆದೇಶ ನೀಡಿದೆ.
ವರದಕ್ಷಿಣೆ ಕಿರುಕುಳ ಆರೋಪದ ಸಂಬಂಧ ಪತಿಯ ಕುಟುಂಬಸ್ಥರ ವಿರುದ್ಧ ಮಾತ್ರ ವಿಚಾರಣೆಗೊಳಪಡಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ, ಅಪರಿಚಿತ, ನೆರೆಹೊರೆಯವರು ಮತ್ತು ಪತಿಯ ಪ್ರಿಯತಮೆಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪದಲ್ಲಿ ವಿಚಾರಣೆಗೆ ಒಳಪಡಿಸಲಾಗುವುದಿಲ್ಲ ಎಂದು ಪೀಠ ಆದೇಶದಲ್ಲಿ ತಿಳಿಸಿದೆ.
ವಿವಾಹದ ಬಳಿಕ ಪತಿಯೊಂದಿಗೆ ಅಕ್ರಮ ಸಂಬಂಧ ಹೊಂದಿರುವ ಮಹಿಳೆಯು ಆ ಕುಟುಂಬದ ಸದಸ್ಯ ಎಂಬುದಾಗಿ ಪರಿಗಣಿಸಲಾಗದು. ಆದ್ದರಿಂದ ಅವರ ವಿರುದ್ಧ ವರದಕ್ಷಿಣೆ ಕಿರುಕುಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದಿಲ್ಲ ಎಂಬುದಾಗಿ ತಿಳಿಸಿರುವ ದೇಚಮ್ಮಾ ವಿರುದ್ಧದ ಕರ್ನಾಟಕ ರಾಜ್ಯ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಉಲ್ಲೇಖಿಸಿರುವ ನ್ಯಾಯಪೀಠ ಈ ಆದೇಶ ನೀಡಿದೆ.
ಅರ್ಜಿದಾರ ಮಹಿಳೆಯ ವಿರುದ್ಧ ಹಲ್ಲೆ ನಡೆಸಿರುವುದು ಮತ್ತು ಕ್ರಿಮಿನಲ್ ಬೆದರಿಕೆಯಂತಹ ಅಪರಾಧಗಳನ್ನು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆದರೆ, ಆರೋಪಪಟ್ಟಿಯನ್ನು ಪರಿಶೀಲಿಸಿದರೆ, ಈ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಆದ್ದರಿಂದ ಅರ್ಜಿದಾರ ಮಹಿಳೆಯನ್ನು ಕ್ರಿಮಿನಲ್ ಪ್ರಕರಣದಲ್ಲಿ ಎಳೆಯುವುದಕ್ಕೆ ಸಾಧ್ಯವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಪ್ರಕರಣದ ಹಿನ್ನೆಲೆ: ದೂರುದಾರ ಮಹಿಳೆ 2021ರ ಜನವರಿ 24ರಂದು ಪ್ರಕರಣದ ಮೊದಲ ಆರೋಪಿಯನ್ನು ವಿವಾಹವಾಗಿದ್ದರು. ಇದಾದ ಕೆಲ ದಿನಗಳ ಬಳಿಕ ಕುಟುಂಬದವರು ಮತ್ತಷ್ಟು ವರದಕ್ಷಿಣೆ ತರುವಂತೆ ದೈಹಿಕವಾಗಿ ಹಿಂಸೆ ನೀಡುತ್ತಿದ್ದರು. ಪತಿ ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದು, ನಿರಾಕರಿಸಿದಾಗ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದರು. ಪತಿ ಪ್ರೇಯಸಿಯೊಂದಿಗೆ ಮೊಬೈಲ್‌ನಲ್ಲಿ ಚಾಟಿಂಗ್ ಮಾಡುವುದು, ಶೌಚಾಲಯದಲ್ಲಿ ಕೂತು ತಾಸುಗಟ್ಟಲೆ ಮಾತನಾಡುವುದು ನಡೆಯುತ್ತಿತ್ತು. ಇದನ್ನು ಪ್ರಶ್ನಿಸಿದಾಗ ನಿನ್ನನ್ನು ವಿವಾಹವಾಗದಿದ್ದರೆ ನನ್ನ ಪ್ರೇಯಸಿಯೊಂದಿಗೆ ಸುಖವಾಗಿರುತ್ತಿದ್ದೆ ಎಂದು ಹೇಳಿ, ಹಲ್ಲೆ ನಡೆಸಿ ಕಾಲು ಮುರಿಯುವಂತೆ ಮಾಡಿರುತ್ತಾರೆ. ಜತೆಗೆ, ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ. ಆದ್ದರಿಂದ ಪತಿಯ ಕುಟುಂಬಸ್ಥರು ಹಾಗೂ ಪ್ರಿಯತಮೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿ ಮೈಸೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
