ಉದಯವಾಹಿನಿ, ಬೆಂಗಳೂರು : ರೌಡಿ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಕೆ.ಆರ್.ಪುರ ಶಾಸಕ ಬೈರತಿ ಬಸವರಾಜು ( ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡಿದ್ದು, ಸಿಐಡಿ ಅಧಿಕಾರಿಗಳು ಅವರ ವಿರುದ್ಧ ಲುಕೌಟ್ ನೋಟಿಸ್ ಹೊರಡಿಸಿದ್ದಾರೆ.
ಬೈರತಿ ಬಸವರಾಜು ಬಂಧನಕ್ಕೆ ಸಿಐಡಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಬೈರತಿ ಬಸವರಾಜು ಅವರು ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿರುವ ಶಂಕೆಯಿದ್ದು, ಸಿಐಡಿ ಪೊಲೀಸ್ ಅಧಿಕಾರಿಗಳು ಮಹಾರಾಷ್ಟ್ರದ ವಿವಿಧೆಡೆ ಪತ್ತೆ ಕಾರ್ಯ ಮುಂದುವರಿಸಿದ್ದಾರೆ. ಈ ಮಧ್ಯೆ ಬೈರತಿ ಬಸವರಾಜು ಅವರು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಅವರ ವಿರುದ್ಧ ಲುಕೌಟ್ ನೋಟಿಸ್ ಹೊರಡಿಸಿದ್ದಾರೆ.
ಬೈರತಿ ಬಸವರಾಜು ಅವರು ಮಹಾರಾಷ್ಟ್ರದ ಪ್ರತಿಷ್ಠಿತ ಹೋಟೆಲ್‌ನಲ್ಲಿ ತಂಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಅವರನ್ನು ಬಂಧಿಸುವ ಉದ್ದೇಶಕ್ಕೆ ವಿಶೇಷ ತಂಡಗಳನ್ನು ಮಹಾರಾಷ್ಟ್ರಕ್ಕೆ ಕಳುಹಿಸಿದ್ದೇವೆ. ಅವರು ವಿದೇಶಕ್ಕೆ ಪರಾರಿಯಾಗದಂತೆ ತಡೆಯಲು ಲುಕ್‌ಔಟ್ ನೋಟಿಸ್ ಸಹ ಜಾರಿ ಮಾಡಿದ್ದೇವೆ. ದೇಶದ ಎಲ್ಲಾ ವಿಮಾನ ನಿಲ್ದಾಣಗಳಿಗೆ ಬೈರತಿ ಬಸವರಾಜು ಅವರ ಬಗ್ಗೆ ಫೋಟೊ ಸಮೇತ ಮಾಹಿತಿ ರವಾನಿಸಿದ್ದೇವೆ,” ಎಂದು ಸಿಐಡಿ ಮೂಲಗಳು ತಿಳಿಸಿವೆ.ರೌಡಿ ಬಿಕ್ಲುಶಿವ ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ”ಕೊಲೆ ಪ್ರಕರಣ ಸಂಬಂಧ ಬೈರತಿ ಬಸವರಾಜು ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅವರಾಗಿಯೇ ಬಂದು ಪೊಲೀಸರಿಗೆ ಶರಣಾದರೆ ಒಳ್ಳೆಯದು. ಇಲ್ಲವಾದರೆ ಪೊಲೀಸರು ಬಂಧಿಸುತ್ತಾರೆ,” ಎಂದು ಹೇಳಿದ್ದಾರೆ.
