ಉದಯವಾಹಿನಿ, ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಭಯೋತ್ಪಾದಕರು ಬಲಿಯಾಗಿದ್ದಾರೆ.ಚಟ್ರೂ ಬೆಲ್ಟ್‌ನಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಬಂದ ನಂತರ ಸೇನೆ, ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿದ್ದಾರೆ. ಬೆಟ್ಟದ ತಪ್ಪಲಿನಲ್ಲಿರುವ ಮಣ್ಣಿನ ಮನೆಯೊಳಗೆ ಮೋಸ್ಟ್ ವಾಂಟೆಡ್ ಉಗ್ರ ಸೈಫುಲ್ಲ ಸೇರಿದಂತೆ ಇಬ್ಬರು ಭಯೋತ್ಪಾದಕರು ಅಡಗಿಕೊಂಡಿದ್ದರು. ಅಲ್ಲಿಗೆ ಭದ್ರತಾ ಪಡೆಗಳು ಬರುತ್ತಿದ್ದಂತೆ ಉಗ್ರರು ಗುಂಡು ಹಾರಿಸಿದರು. ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿ, ಮನೆಯನ್ನು ಸ್ಫೋಟಿಸಿವೆ.
ಸೇನೆಯ ದಾಳಿಗೆ ಅಡಗಿದ್ದ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಎನ್‌ಕೌಂಟರ್ ನಡೆದ ಸ್ಥಳದಲ್ಲಿ 2 ಎಕೆ-47 ರೈಫಲ್‌ಗಳನ್ನು ಸೇನೆ ವಶಕ್ಕೆ ಪಡೆದಿದೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. ಉಗ್ರರನ್ನು ಮಟ್ಟ ಹಾಕಲು ಆಪರೇಷನ್ ಟ್ರಾಶಿ-I (OperationTrashi-I) ಹೆಸರಿನಲ್ಲಿ ಭದ್ರತಾ ಪಡೆಗಳು ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ.ಚಟ್ರೂ ಅರಣ್ಯ ಪ್ರದೇಶದಲ್ಲಿ ಜನವರಿಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಹಲವಾರು ಬಾರಿ ಗುಂಡಿನ ಚಕಮಕಿ ನಡೆದಿತ್ತು. ಆ ದಾಳಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದರು. ಭದ್ರತಾ ಪಡೆಗಳು ಒಬ್ಬ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದರು.
