ಉದಯವಾಹಿನಿ: ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲರ್ ಆಕಿಬ್ ನಬಿ ಕರ್ನಾಟಕ ವಿರುದ್ಧದ ತಮ್ಮ ಮೊದಲ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಐದು ವಿಕೆಟ್‌ಗಳ ಸಾಧನೆ ಮಾಡಿದರು. ಆ ಮೂಲಕ ತಮ್ಮ ತಂಡದ ಪ್ರಥಮ ಇನಿಂಗ್ಸ್‌ನಲ್ಲಿ ಮುನ್ನಡೆ ಪಡೆಯುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ. ತಮ್ಮ ಈ ಅದ್ಭುತ ಸ್ಪೆಲ್‌ನಿಂದ ಆಕಿಬ್ ದೇಶಿ ಕ್ರಿಕೆಟ್‌ನಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ. ಈ ಪ್ರದರ್ಶನದ ನಂತರ, ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಆಯ್ಕೆ ಸಮಿತಿಗೆ ಆಕಿಬ್ ನಬಿಯನ್ನು ಇಂಗ್ಲೆಂಡ್ ಪ್ರವಾಸಕ್ಕಾಗಿ ಪರಿಗಣಿಸಲು ಮನವಿ ಮಾಡಿದ್ದಾರೆ. ರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡಲು ಇದು ಅತ್ಯುತ್ತಮ ವೇದಿಕೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಹುಬ್ಬಳ್ಳಿಯ ಕೆಎಸ್‌ಸಿಎ ಮೈದಾನದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ 584 ರನ್‌ಗಳ ಭಾರೀ ಮೊತ್ತ ಕಲೆಹಾಕಿದ ನಂತರ, ಕರ್ನಾಟಕವನ್ನು 293 ರನ್‌ಗಳಿಗೆ ಆಲ್‌ಔಟ್ ಮಾಡಿ 291 ರನ್‌ಗಳ ಭರ್ಜರಿ ಮುನ್ನಡೆ ಪಡೆಯಿತು. ಉತ್ತಮ ಲಯದಲ್ಲಿದ್ದ ಕರ್ನಾಟಕ ಬ್ಯಾಟಿಂಗ್ ಘಟಕದ ವಿರುದ್ಧ ಆಕಿಬ್ ನಬಿ ಐದು ವಿಕೆಟ್‌ಗಳನ್ನು ಪಡೆದರು. ತಮ್ಮ ಸೋಶಿಯಲ್ ಮೀಡಿಯಾದ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿದ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ, ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಹಾಗೂ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರನ್ನು ಟ್ಯಾಗ್ ಮಾಡಿ, ನಬಿಗೆ ಭಾರತ ತಂಡದ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.
