ಉದಯವಾಹಿನಿ, ಮಹಾರಾಷ್ಟ್ರ: ನಾಗ್ಪುರ ಜಿಲ್ಲೆಯ ಸ್ಫೋಟಕ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಟೋಲ್ ತಹಸಿಲ್‌ನ ರೌಲ್ಗಾಂವ್‌ ಎಂಬಲ್ಲಿರುವ ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕ ತಯಾರಕ ಕಾರ್ಖಾನೆ ಎಸ್‌ಬಿಎಲ್ ಎನರ್ಜಿ ಲಿಮಿಟೆಡ್‌ನಲ್ಲಿ ಘಟನೆ ನಡೆದಿದೆ.ಗಾಯಾಳುಗಳನ್ನು ನಾಗ್ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಎಸ್‌ಬಿಎಲ್ ಎನರ್ಜಿ ಲಿಮಿಟೆಡ್ ಪ್ರತಿನಿಧಿಗಳು ಪ್ರತಿಕ್ರಿಯಿಸಿ, ಕಾರ್ಖಾನೆಯ ಡಿಟೋನೇಟರ್ ಪ್ಯಾಕಿಂಗ್ ಘಟಕದಲ್ಲಿ ಬೆಳಿಗ್ಗೆ 7ರಿಂದ 7.15ರ ನಡುವೆ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ.ಜಿಲ್ಲಾಧಿಕಾರಿ ವಿಪಿನ್ ಇಟಂಕರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಹರ್ಷ್ ಪೋದರ್ ಸ್ಥಳದಲ್ಲಿದ್ದರು.
ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯ ಪಟಾಕಿ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 21 ಮಂದಿ ಸಾವನ್ನಪ್ಪಿದ ಒಂದು ದಿನದ ನಂತರ ಈ ಘಟನೆ ನಡೆದಿದೆ.
ಪರಿಹಾರ ಘೋಷಿಸಿದ ಪ್ರಧಾನಿ: ಸ್ಫೋಟದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 50,000 ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
“ಮಹಾರಾಷ್ಟ್ರದ ನಾಗ್ಪುರದ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟ ತೀವ್ರ ದುಃಖಕರ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತೇನೆ. ಸ್ಥಳೀಯ ಆಡಳಿತ ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ” ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ ಪೋಸ್ಟ್‌ನಲ್ಲಿ ಪ್ರಧಾನಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!