ಉದಯವಾಹಿನಿ, 2026 ರ ಟಿ20 ವಿಶ್ವಕಪ್ ನಡುವೆ ಐಸಿಸಿ, ನೂತನ ಟಿ20 ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳು ಮತ್ತು ಬೌಲರ್‌ಗಳು ಭರ್ಜರಿ ಮುಂಬಡ್ತಿ ಪಡೆದಿದ್ದಾರೆ. ಅದರಲ್ಲೂ ವೆಸ್ಟ್ ಇಂಡೀಸ್ ವಿರುದ್ಧದ ಸೂಪರ್ 8 ಸುತ್ತಿನ ಕೊನೆಯ ಪಂದ್ಯದಲ್ಲಿ 97 ರನ್ಗಳ ಅಜೇಯ ಇನ್ನಿಂಗ್ಸ್ ಆಡಿದ್ದ ಸಂಜು ಸ್ಯಾಮ್ಸನ್ 25 ಸ್ಥಾನ ಮೇಲೇರಿದ್ದಾರೆ.
ಸಂಜು ಸ್ಯಾಮ್ಸನ್ ಜೊತೆಗೆ ಇಡೀ ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ತಿಲಕ್ ವರ್ಮಾ ಮತ್ತು ಇಶಾನ್ ಕಿಶನ್ ಕೂಡ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಲಾಭ ಗಳಿಸಿದ್ದಾರೆ. ಬೌಲರ್‌ಗಳಲ್ಲಿ, ಸ್ಟಾರ್ ಬೌಲರ್‌ಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಅರ್ಶ್‌ದೀಪ್ ಸಿಂಗ್ ತಮ್ಮ ಶ್ರೇಯಾಂಕಗಳನ್ನು ಸುಧಾರಿಸಿಕೊಂಡಿದ್ದಾರೆ. ಈ ಮೊದಲು 65ನೇ ಸ್ಥಾನದಲ್ಲಿದ್ದ ಸಂಜು ಸ್ಯಾಮ್ಸನ್ ಇದೀಗ ಬರೋಬ್ಬರಿ 25 ಸ್ಥಾನಗಳನ್ನು ಮೇಲೇರಿ 549 ರೇಟಿಂಗ್ ಪಾಯಿಂಟ್‌ಗಳೊಂದಿಗೆ 40 ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಹಾಗೆಯೇ ಮತ್ತೊಬ್ಬ ಆರಂಭಿಕ ಆಟಗಾರ ಇಶಾನ್ ಕಿಶನ್ ಕೂಡ ಲಾಭ ಪಡೆದಿದ್ದು, ಐದನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ.
