ಉದಯವಾಹಿನಿ, ಮಂಡ್ಯ: ಪಂಚ ನದಿಗಳ ಬೀಡು ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಬೇಸಿಗೆಯಲ್ಲಿ  ಕುಡಿಯುವ ನೀರಿನ ಅಭಾವ ಹೆಚ್ಚಾಗುವ ಸಾಧ್ಯತೆಯಿದೆ. ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಉದ್ಭವಿಸಬಹುದಾದ 239 ಸಂಭವನೀಯ ಗ್ರಾಮಗಳನ್ನ ಪಟ್ಟಿ ಮಾಡಿದ್ದು, ಮುಂದಿನ ದಿನಗಳಲ್ಲಿ ಈ ಸಮಸ್ಯೆ ಮತ್ತಷ್ಟು ಜಟಿಲವಾದರೂ ಆಶ್ಚರ್ಯ ಪಡುವಂತಿಲ್ಲ.

ಬೇಸಿಗೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗುವ ಗ್ರಾಮಗಳನ್ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಈಗಾಗಲೇ ಪಟ್ಟಿ ಮಾಡಿಕೊಂಡಿದ್ದು, ಬೇಸಿಗೆಯಲ್ಲಿ ನೀರಿನ ದಾಹ ನೀಗಿಸಲು ಸಿದ್ಧತೆ ಕೈಗೊಂಡಿದ್ದಾರೆ. ಆದ್ರೆ ಟ್ಯಾಂಕರ್  ಮೂಲಕ ನೀರು ಸರಬರಾಜು ಮಾಡಲಾಗುವ ಗ್ರಾಮಗಳ ಸಂಖ್ಯೆ ಪಟ್ಟಿಯಲ್ಲಿ ಇಲ್ಲದಿರುವುದು ಸಮಾಧಾನದ ಸಂಗತಿಯಾಗಿದೆ. ಆದರೆ, ಈ ನಡುವೆ ಮಂಡ್ಯ ತಾಲ್ಲೂಕಿನ ಮೊಳೆಕೊಪ್ಪಲು ಗ್ರಾಮದಲ್ಲಿ ಈಗಾಗಲೇ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದು ಎಚ್ಚರಿಕೆ ಗಂಟೆಯಾಗಿದೆ.

ಬೇಸಿಗೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉದ್ಭವಿಸಬಹುದಾದ ಒಟ್ಟು 239 ಗ್ರಾಮಗಳನ್ನ ಗುರುತು ಮಾಡಿದ್ದು, 206 ಖಾಸಗಿ ಬೋರ್‌ವೆಲ್‌ಗಳನ್ನ ಗುರುತಿಸಲಾಗಿದೆ. ಉಳಿದಂತೆ ಜಿಲ್ಲೆಯಲ್ಲಿ 33 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಉದ್ದೇಶಿಸಿರುವ ಗ್ರಾಮಗಳನ್ನ ಗುರುತು ಮಾಡಲಾಗಿದೆ. ಈ ಗ್ರಾಮಗಳಿಗೆ ಯಾವುದೇ ಸಂದರ್ಭದಲ್ಲೂ ಕುಡಿಯುವ ನೀರಿಗೆ ಅಭಾವ ಸೃಷ್ಟಿಯಾಗುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ. ಅದಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇರುವ ಸಂಭಾವ್ಯ ಗ್ರಾಮಗಳನ್ನು ಗುರುತಿಸಿ ನೀರಿನ ದಾಹ ನೀಗಿಸಲು ಸಿದ್ಧತೆ ಮಾಡಿಕೊಂಡಿದೆ.

 

Leave a Reply

Your email address will not be published. Required fields are marked *

error: Content is protected !!