ಉದಯವಾಹಿನಿ, ಬೆಂಗಳೂರು: ರಾಜ್ಯ ಸರ್ಕಾರವು ಮೀಸಲಾತಿಯನ್ನು ಸರಿಯಾದ ರೀತಿಯಲ್ಲಿ ಅನುಷ್ಠಾನ ಮಾಡದೇ ಗೊಂದಲ ಸೃಷ್ಟಿಸಿಕೊಂಡು ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ. ಇದನ್ನು ಖಂಡಿಸಿ ಭಾರತೀಯ ಜನತಾ ಪಕ್ಷ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಿದೆ ಎಂದು ಮಾಜಿ ಸಚಿವ ಶ್ರೀ ಬಿ.ಶ್ರೀರಾಮುಲು ಅವರು ಎಚ್ಚರಿಕೆ ನೀಡಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುವುದಕ್ಕಿಂತ ಮೊದಲು ನೀಡಿದ ಭರವಸೆಗಳನ್ನು, ಆಶ್ವಾಸನೆಗಳನ್ನು ಜಾರಿ ಮಾಡಲಿಲ್ಲ. ಒಂದು ವರ್ಷದಲ್ಲಿ ಒಂದು ಲಕ್ಷ ಹುದ್ದೆ ಭರ್ತಿ ಮಾಡುತ್ತೇವೆ ಅಂತ ಹೇಳಿದ್ದರು. ಆದರೆ ಇಷ್ಟು ಸಮಯವಾದರೂ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಿಲ್ಲ. ರಾಜ್ಯದಲ್ಲಿ ಸುಮಾರು 2.85 ಲಕ್ಷ ಹುದ್ದೆ ಖಾಲಿ ಇದೆ. ಈ ಬಗ್ಗೆ ಕ್ರಮ ಕೈಗೊಳ್ಳದೇ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ.
