ಉದಯವಾಹಿನಿ, ಹಾವೇರಿ: 8 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳದ ರಾಶಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ಹಾವೇರಿ ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ಗ್ರಾಮದ ರೈತ ಪರಮೇಶಪ್ಪ ನಾಗಣ್ಣನವರ್ ಎಂಬವರಿಗೆ ಸೇರಿದ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾಗಿದೆ. ಸುಮಾರು 4 ಲಕ್ಷ ಮೌಲ್ಯದ ಮೆಕ್ಕೆಜೋಳದ ಫಸಲು ಸುಟ್ಟು ಭಸ್ಮವಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಾಲ್ ಮೆಕ್ಕೆಜೋಳಕ್ಕೆ 1,500 ರಿಂದ 1,600 ರೂ. ದರ ಇದೆ. ದರ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಅನ್ನದಾತನ ಮೆಕ್ಕೆಜೋಳದ ರಾಶಿಗೆ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ.
ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
