ಉದಯವಾಹಿನಿ, ಮಣಿಪುರದ ಬಾಲಕಿಯೊಬ್ಬಳಿಗೆ ಕಿರುಕುಳ ನೀಡಿ ಹಲ್ಲೆ ನಡೆಸಿರುವ ಘಟನೆ ದೆಹಲಿಯ ಸಾಕೇತ್ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ವರದಿಗಳ ಪ್ರಕಾರ, ಬಾಲಕಿ ಮತ್ತು ಆಕೆಯ ಸ್ನೇಹಿತ ಉದ್ಯಾನವನದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪುರುಷರ ಗುಂಪೊಂದು ಅವರನ್ನು ಅಶ್ಲೀಲವಾಗಿ ನಿಂದಿಸಿದ್ದಾರೆ.
ಗುಂಪಿನ ಅಶ್ಲೀಲವಾಗಿ ನಿಂದನೆಗಳಿಗೆ ಬಾಲಕಿ ಆಕ್ಷೇಪ ವ್ಯಕ್ತಪಡಿಸಿದಾಗ ವಾಗ್ವಾದ ನಡೆದಿದೆ. ನಂತರ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಇದರಿಂದ ಬಾಲಕಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವೈದ್ಯಕೀಯ ಪರೀಕ್ಷೆ ಮತ್ತು ಚಿಕಿತ್ಸೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಸಿಕ್ಕ ನಂತರ ಪೊಲೀಸರು ಸ್ಥಳಕ್ಕಾಗಮಿಸಿ ಸಂತ್ರಸ್ತೆಯನ್ನು ಭೇಟಿ ಮಾಡಿದ್ದಾರೆ. ಪೊಲೀಸರು ಆಕೆಯ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಮತ್ತು ಆಕೆಯ ಹೇಳಿಕೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಆರೋಪಿಗಳನ್ನು ಗುರುತಿಸಲು ಮತ್ತು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಆರೋಪಿಗಳ ವಿರುದ್ಧ ಕಠಿಣ ಕ್ರಮ: ದಕ್ಷಿಣ ದೆಹಲಿ ಜಿಲ್ಲಾ ಪೊಲೀಸ್ ಉಪ ಆಯುಕ್ತ ಅಂಕಿತ್ ಚೌಹಾಣ್ ಮಾತನಾಡಿ, ಭಾನುವಾರ ಸಂಜೆ ಮಣಿಪುರದ ಬಾಲಕಿಯರು ಸಾಕೇತ್ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಬಳಿಯ ಉದ್ಯಾನವನದಲ್ಲಿ ತನ್ನ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ, ಕೆಲ ಪುರುಷರು ಅವರ ಬಗ್ಗೆ ಅಶ್ಲೀಲವಾಗಿ ಮಾತನಾಡಿದ್ದಾರೆ. ಬಾಲಕಿಯರಲ್ಲಿ ಒಬ್ಬರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದಾಗ ವಾಗ್ವಾದ ನಡೆದಿದೆ. ನಂತರ ಗುಂಪು ಬಾಲಕಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದರು.
ಗಾಯಗೊಂಡ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆ ಮತ್ತು ಚಿಕಿತ್ಸೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ರವಾನಿಸಲಾಯಿತು. ಪ್ರಾಥಮಿಕ ವರದಿಗಳ ಪ್ರಕಾರ, ಸದ್ಯ ಬಾಲಕಿ ಚೆನ್ನಾಗಿದ್ದಾಳೆ ಮತ್ತು ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸ್ ತಂಡವು ಬಾಲಕಿಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
