ಉದಯವಾಹಿನಿ, ನವದೆಹಲಿ: ಭಾರತ್ ಜೋಡೋ ಯಾತ್ರೆಯಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ ಕ್ರಿಮಿನಲ್ ನ್ಯಾಯಾಲಯ ಮುಕ್ತಾಯಗೊಳಿಸಿದೆ.
ನಾಸಿಕ್ ಮೂಲದ ನಿರ್ಭಯಾ ಫೌಂಡೇಶನ್ ಅಧ್ಯಕ್ಷ ದೇವೇಂದ್ರ ಭುತಡಾ ಅವರು ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು. 2022ರ ಜೂನ್ 15, 16ರಂದು ಹಿಂಗೋಲಿ ಮತ್ತು ಅಕೋಲೆಯಲ್ಲಿ ನಡೆದ ರ್‍ಯಾಲಿಗಳಲ್ಲಿ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗಳು ಮಾನಹಾನಿಕರ ಮತ್ತು ಅವಹೇಳನಕಾರಿಯಾಗಿತ್ತು ಎಂದು ಅವರು ಆರೋಪಿಸಿದ್ದರು. ಭುತಡಾ ಅವರ ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 499 (ಮಾನನಷ್ಟ) ಮತ್ತು 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಾಸಿಕ್ ನ್ಯಾಯಾಲಯ ಸೆಪ್ಟೆಂಬರ್ 2024ರಲ್ಲಿ ರಾಹುಲ್ ಗಾಂಧಿಯವರಿಗೆ ಸಮನ್ಸ್ ಜಾರಿ ಮಾಡಿತ್ತು.
ನಂತರ ಜಾಮೀನು ಮಂಜೂರು ಮಾಡಿದ್ದ ನ್ಯಾಯಾಲಯ, ವರ್ಚುವಲ್ (ವಿಡಿಯೋ ಕಾನ್ಫರೆನ್ಸಿಂಗ್) ಮೂಲಕ ವಿಚಾರಣೆಗೆ ಹಾಜರಾಗಲು ಅನುಮತಿ ನೀಡಿತ್ತು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದರು.
