ಉದಯವಾಹಿನಿ, ಬೆಂಗಳೂರು: ಪಾರಂಪರಿಕ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಉತ್ಪನ್ನಗಳಿಗೆ ನಮ್ಮಲ್ಲೇ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಯಶವಂತಪುರದಲ್ಲಿರುವ ಇಲಾಖೆಯ ಒಂದೂವರೆ ಎಕರೆ ಪ್ರದೇಶದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದರು.
ರಾಜಾಜಿನಗರದ ಡಾ.ಬಿ.ಆರ್.ಅಂಬೇಡ್ಕರ್ ಸ್ಟೇಡಿಯಂನಲ್ಲಿ 14 ದಿನಗಳ ಭಾರತೀಯ ಕೈಮಗ್ಗ ಪರಂಪರೆ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಸಿಎಂ ಜೊತೆ ಚರ್ಚಿಸಿ ಶೀಘ್ರದಲ್ಲಿ ಶಂಕುಸ್ಥಾಪನೆ ನೆರವೇರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಪಾರಂಪರಿಕ ಕಲೆ ನಶಿಸಿ ಹೋಗುತ್ತಿದೆ. ಈ ಕಲೆಯನ್ನು ಉಳಿಸಿ ಬೆಳೆಸಲು ಉತ್ಪನ್ನಗಳಿಗೆ ಸ್ಥಳೀಯ ಮಾರುಕಟ್ಟೆ ಕಲ್ಪಿಸಬೇಕಾಗಿದೆ. ಯಶವಂತಪುರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಟ್ಟಡದಲ್ಲಿ ಕೈಮಗ್ಗ ಉತ್ಪನ್ನಗಳು, ಚನ್ನಪಟ್ಟಣದ ಗೊಂಬೆ, ಕುಂಬಾರಿಕೆ ಸೇರಿದಂತೆ ಎಲ್ಲ ರೀತಿಯ ಪಾರಂಪರಿಕ ಕಲೆಯ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲು ಯೋಜಿಸಲಾಗಿದೆ ಎಂದು ಹೇಳಿದರು. ರಾಜ್ಯದ ಕೈಮಗ್ಗ ಉತ್ಪನ್ನಗಳು ಹೊರ ರಾಜ್ಯಗಳಲ್ಲಿ ಬೇರೆ ಬೇರೆ ಬ್ರ್ಯಾಂಡ್‌ಗಳಲ್ಲಿ ಮಾರಾಟವಾಗುತ್ತಿವೆ. ನಮ್ಮದೇ ಉತ್ಪನ್ನಗಳು ಬೇರೆ ರಾಜ್ಯಗಳಿಂದ ಬೇರೆ ಬ್ರಾಂಡ್‌ಗಳ ರೂಪದಲ್ಲಿ ರಾಜ್ಯಕ್ಕೆ ಬರುತ್ತಿವೆ. ಸ್ಥಳೀಯವಾಗಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದರೆ ಈ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
