ಉದಯವಾಹಿನಿ, ಬೆಂಗಳೂರು: ರಾಜ್ಯಾದಾದ್ಯಂತ ಅಕ್ರಮವಾಗಿ ಮದ್ಯ ಮಾರಾಟ ಮಾರಾಟ ಮಾಡುವುದನ್ನು ಹಾಗೂ ಅಕ್ರಮವಾಗಿ ಮದ್ಯ ತಯಾರಿಸಿ ಮಾರಾಟ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಕ್ರಮ ಮಾರಾಟ ತಡೆಗಟ್ಟಲು ಕರ್ನಾಟಕ ಅಬಕಾರಿ ಕಾಯ್ದೆಯನ್ನು ಪರಿಷ್ಕರಿಸಿ ಹೊಸ ಕಾಯ್ದೆ ತರುವುದಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಅಲ್ಲದೆ, ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿ ಸೇರಿಸಲು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಸಚಿವ ಆರ್.ಬಿ ತಿಮ್ಮಾಪುರ್ ತಿಳಿಸಿದರು.
ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ಅವರು ರಾಯಚೂರು ಜಿಲ್ಲೆಯಲ್ಲಿ ಸ್ವಲಾಭಕ್ಕಾಗಿ ಅನಧಿಕೃತ ಸ್ಥಳಗಳಲ್ಲಿ, ಕಿರಾಣಿ ಅಂಗಡಿಗಳಲ್ಲೂ ಸಹ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಕರ್ನಾಟಕ ಅಬಕಾರಿ ಕಾಯ್ದೆಗಳ 1965ರ ಕಾಯ್ದೆಗಳ ರೀತ್ಯಾ ಯಾವುದೇ ಕ್ರಮ ಆಗುತ್ತಿಲ್ಲ. ಈ ಬಗ್ಗೆ ಸರ್ಕಾರ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ವಿಶೇಷ ಪಡೆಗಳನ್ನು ರಚಿಸಬೇಕು ಎಂದು ಪ್ರಶ್ನಿಸಿದರು.
ಈ ಸಮಯದಲ್ಲಿ ಶಾಸಕರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಬಕಾರಿ ಅಕ್ರಮಗಳನ್ನು ನಿಯಂತ್ರಿಸಲು ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ರೂಟ್ ಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ. ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ರಸ್ತೆ ಗಾವಲು ನಡೆಸಿ ಸಂಶಯಾಸ್ಪದ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ಸಭೆಯನ್ನು ಏರ್ಪಡಿಸಿ ಅಕ್ರಮ ಹತ್ತಿಕ್ಕಲು ಕ್ರಮ ವಹಿಸಲಾಗುತ್ತಿದೆ. ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 50ರಂತೆ ಕಾರ್ಯವ್ಯಾಪ್ತಿಯಲ್ಲಿ ನಡೆಯುವ ಅಬಕಾರಿ ಅಕ್ರಮಗಳ ಕುರಿತು ನಿಯಮಗಳನುಸಾರ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದರು.
