ಉದಯವಾಹಿನಿ, ಮಹಿಳಾ ಪ್ರಧಾನ ಆ್ಯಕ್ಷನ್ ಕಹಾನಿ ಇರುವ ‘ಪೊಲೀಸ್ ಕಂಪ್ಲೈಂಟ್’ ಸಿನಿಮಾದಲ್ಲಿ ವರಲಕ್ಷ್ಮೀ ಶರತಕುಮಾರ್ ಹಾಗೂ ರಾಗಿಣಿ ದ್ವಿವೇದಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ನವೀನ್ ಚಂದ್ರ, ಕೃಷ್ಣ ಸಾಯಿ ಅವರು ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ. ರವಿಶಂಕರ್, ಶರತ್ ಲೋಹಿತಾಶ್ವ, ಸಪ್ತಗಿರಿ, ಅನಿಲ್ ರಾಜ್, ಪೃಥ್ವಿರಾಜ್, ಜೆಮಿನಿ ಸುರೇಶ್ ಮುಂತಾದ ಕಲಾವಿದರು ನಟಿಸಿದ್ದಾರೆ. ಈ ಹಿಂದೆ ‘ಅನು’, ‘ದಂಡು’, ‘ಆಪ್ತ’ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದ್ದ ಸಂಜೀವ ಮೆಗೋಟಿ ಅವರು ‘ಪೊಲೀಸ್ ಕಂಪ್ಲೈಂಟ್’ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಎಂ.ಎಸ್.ಕೆ. ಪ್ರಮೀದಾಶ್ರೀ ಫಿಲ್ಮ್ಸ್’ ಬ್ಯಾನರ್ ಮೂಲಕ ‘ಪೊಲೀಸ್ ಕಂಪ್ಲೈಂಟ್’ ಚಿತ್ರ ನಿರ್ಮಾಣವಾಗಿದೆ. ಈಗಾಗಲೇ ಬಹುತೇಕ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ ಟೀಸರ್ ಮತ್ತು ಹಾಡೊಂದನ್ನು ಬಿಡುಗಡೆ ಮಾಡಿದೆ. ನಟಿ ಪ್ರೇಮಾ ಟೀಸರ್ ರಿಲೀಸ್ ಮಾಡಿದರು. ಮೊದಲ ಹಾಡನ್ನು ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್.ಆರ್.ಕೆ. ವಿಶ್ವನಾಥ್ ಬಿಡುಗಡೆಗೊಳಿಸಿದರು.
ಈ ವೇಳೆ ನಿರ್ದೇಶಕ ಸಂಜೀವ್ ಮೆಗೋಟಿ ಮಾತನಾಡಿದರು. ‘ಸುಮಾರು 10 ವರ್ಷದ ನಂತರ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೆ ಬರುತ್ತಿರುವುದಕ್ಕೆ ಖುಷಿಯಾಗುತ್ತಿದೆ. ನಾವು ಮಾಡಿದ ಕರ್ಮ ಹೇಗೆ ನಮ್ಮನ್ನು ಕಾಡುತ್ತದೆ ಎಂಬ ಒಂದು ಎಳೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಕನ್ನಡ ಮತ್ತು ತೆಲುಗಿನ ಸುಮಾರು 50ಕ್ಕೂ ಹೆಚ್ಚಿನ ಕಲಾವಿದರು ನಟಿಸಿದ್ದಾರೆ. ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡುವ ಯೋಜನೆಯಿದೆ’ ಎಂದು ಅವರು ಹೇಳಿದರು.
