ಉದಯವಾಹಿನಿ, ಆಗ್ರಾ, ಉತ್ತರ ಪ್ರದೇಶ: 8 ವರ್ಷದ ಅಮಾಯಕ ಬಾಲಕಿಯನ್ನು ಕೊಂದು ಆಕೆಯ ಶವವನ್ನು ಡ್ರಮ್‌ನೊಳಗೆ ಬಚ್ಚಿಟ್ಟ ಕೊಲೆ ಆರೋಪಿಯನ್ನು ಪೊಲೀಸರು ಎನ್‌ಕೌಂಟರ್‌ ಮಾಡಿದ್ದಾರೆ. ಪೊಲೀಸರ ಮೇಲೆ ದಾಳಿ ಮಾಡಿದ ಆರೋಪಿಗೆ ಪೊಲೀಸರು ಗುಂಡು ಹಾರಿಸಿದ್ದರಿಂದ ಆತ ಗಾಯಗೊಂಡಿದ್ದ, ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಸಾವನ್ನಪ್ಪಿದ್ದಾನೆ ಎಂದು ಡಿಸಿಪಿ ಸೈಯದ್ ಅಲಿ ಅಬ್ಬಾಸ್ ಹೇಳಿದ್ದಾರೆ. ಆಗ್ರಾದಲ್ಲಿ ಶುಕ್ರವಾರ ತಡರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಸ್‌ಐ) ಕೂಡ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸೆರೆಹಿಡಿದವರಿಗೆ ₹25,000 ಬಹುಮಾನ ಕೂಡಾ ಘೋಷಿಸಲಾಗಿತ್ತು.

70 ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ತಂಡವು ತಲೆಮರೆಸಿಕೊಂಡಿದ್ದ ಆರೋಪಿ ಸುನಿಲ್‌ಗಾಗಿ ಹುಡುಕಾಟ ನಡೆಸಿತ್ತು ಎಂದು ನಗರ ಡಿಸಿಪಿ ಸೈಯದ್ ಅಲಿ ಅಬ್ಬಾಸ್ ಬಹಿರಂಗಪಡಿಸಿದ್ದಾರೆ. ತನಿಖೆಯ ಸಮಯದಲ್ಲಿ 250 ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತಂಡಗಳು ನಿರಂತರ ದಾಳಿ ನಡೆಸುತ್ತಿದ್ದವು. ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸಲು, ಅವರ ಕುಟುಂಬ ಸದಸ್ಯರು, ಸಂಬಂಧಿಕರು ಮತ್ತು ಸ್ನೇಹಿತರು ಸೇರಿದಂತೆ 22 ವ್ಯಕ್ತಿಗಳನ್ನು ವಿಚಾರಣೆಗಾಗಿ ಈಗಾಗಲೇ ಬಂಧಿಸಲಾಗಿತ್ತು. ಕೊಲೆ ಆರೋಪಿ ಸುನಿಲ್ ಬಗ್ಗೆ ಪೊಲೀಸ್ ತಂಡಗಳಿಗೆ ನಿಖರವಾದ ಗುಪ್ತಚರ ಮಾಹಿತಿ ಸಿಕ್ಕಿತ್ತು. ಬಮ್ರೌಲಿ ಕತಾರ ಪೊಲೀಸ್ ಠಾಣೆ ಪ್ರದೇಶದಲ್ಲಿ ನಿಯಮಿತ ತಪಾಸಣೆ ನಡೆಸುತ್ತಿದ್ದಾಗ, ಕೊಲೆ ಆರೋಪಿ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿದ್ದ. ಪೊಲೀಸರು ತನ್ನನ್ನು ಸುತ್ತುವರೆದಿದ್ದಾರೆ ಎಂದು ಗೊತ್ತಾದ ಆರೋಪಿ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆಯೇ ಗುಂಡ ಹಾರಿಸಿದ್ದ ಎಂದು ನಗರ ಡಿಸಿಪಿ ಸೈಯದ್ ಅಲಿ ಅಬ್ಬಾಸ್ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!