ಉದಯವಾಹಿನಿ, ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲ್ಲೂಕಿನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಕಾರೊಂದು ಬಾವಿಗೆ ಉರುಳಿ ಬಿದ್ದ ಪರಿಣಾಮ ಮಕ್ಕಳು ಸೇರಿ ಒಂದೇ ಕುಟುಂಬದ 9 ಮಂದಿ ದುರ್ಮಣಕ್ಕೀಡಾಗಿದ್ದಾರೆ. ಅಪಘಾತಕ್ಕೆ ಇನ್ನೂ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಶುಕ್ರವಾರ ತಡರಾತ್ರಿ ಕಾರ್ಯಕ್ರಮ ಮುಗಿಸಿ ಬರುವಾಗ ಕಾರು ಬಾವಿಗೆ ಬಿದ್ದು ಘಟನೆ ಸಂಭವಿಸಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ಪ್ರಸ್ತುತ ಮುಂದುವರಿದಿದೆ ಎಂದು ತಿಳಿದುಬಂದಿದೆ.
ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನ ಶಿವಾಜಿನಗರ ಪ್ರದೇಶದ ರಾಜ್ ಬ್ಯಾಂಕ್ವೆಟ್ ಹಾಲ್ನಲ್ಲಿ ಶುಕ್ರವಾರ ಸಂಜೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಕೂಡ ಭಾಗಿಯಾಗಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಕಾರ್ಯಕ್ರಮ ಮುಗಿದ ನಂತರ, ದಿಂಡೋರಿಯ ದರ್ಗೋಡ್ ಕುಟುಂಬವು ಮಾರುತಿ XL6 ಕಾರಿನಲ್ಲಿ ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
