ಉದಯವಾಹಿನಿ, ಬೆಂಗಳೂರು: ಗೌರವ ಡಾಕ್ಟರೇಟ್ ಪದವಿಯನ್ನು ನಾನು ಸ್ವೀಕರಿಸುವುದಿಲ್ಲ. ಬೇರೆ ಸಾಧಕರಿಗೆ ನೀಡಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ ವಿಶ್ವವಿದ್ಯಾಲಯಕ್ಕೆ ಮನವಿ ಮಾಡಿದ್ದಾರೆ.ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಪ್ರಕಟಿಸಿ ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.
ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು ಮತ್ತು ಧನ್ಯವಾದಗಳು.
ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ. ಸಾರ್ವಜನಿಕ ಸೇವೆಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ಅತ್ಯಂತ ದೊಡ್ಡ ಗೌರವವೆಂದು ಭಾವಿಸುತ್ತೇನೆ. ಆದ್ದರಿಂದ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ವಿನಮ್ರವಾಗಿ ಪುನರುಚ್ಚರಿಸುತ್ತೇನೆ. ಗೌರವ ಡಾಕ್ಟರೇಟ್ ಎಂಬುದು ದೀರ್ಘಕಾಲದಿಂದ ಯಾವುದಾದರೂ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಬೇಕಾದ ಗೌರವವೆಂಬುದು ನನ್ನ ಅಭಿಪ್ರಾಯ. ಹೀಗಾಗಿ ಇದನ್ನು ಅಂಥ ಸಾಧಕರಿಗೆ ನೀಡಬೇಕು. ರಾಜಕಾರಣಿಗಳಿಗೆ ಅಥವಾ ಸ್ವಯಂ ಪ್ರೇರಣೆಯಿಂದ ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಗೌರವ ಡಾಕ್ಟರೇಟ್ ನೀಡುವುದು ಸಮಂಜಸವಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ವಿಷಯದಲ್ಲಿ ಪುನರ್ ವಿಚಾರ ಮಾಡಬೇಕೆಂದು ವಿನಂತಿಸುತ್ತೇನೆ. ಮತ್ತೊಮ್ಮೆ ವಿನಯಪೂರ್ವಕವಾಗಿ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ತಿಳಿಸುತ್ತಾ, ಹಾವೇರಿ ವಿಶ್ವವಿದ್ಯಾಲಯಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
