ಉದಯವಾಹಿನಿ,ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿನ ರಾಜಕೀಯ ಬೆಳವಣಿಗೆಗಳು ಮತ್ತು ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಸಿಎಂ ಸ್ಥಾನ ಬದಲಾವಣೆಯ ವದಂತಿಗಳಿಗೆ ಅವರು ಪರೋಕ್ಷವಾಗಿ ಪುಷ್ಟಿ ನೀಡಿದ್ದಾರೆ.
“ನಾವು ನಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು, ಫಲಾಫಲಗಳನ್ನು ದೇವರಿಗೆ ಬಿಡಬೇಕು. ಅದೇ ರೀತಿ ನಮ್ಮ ಡಿ.ಕೆ. ಶಿವಕುಮಾರ್ ಸಾಹೇಬರು ಪಕ್ಷದ ಜವಾಬ್ದಾರಿಯನ್ನು ಹೊತ್ತು ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮುಂಬರುವ ದಿನಗಳಲ್ಲಿ ಒಳ್ಳೆಯ ಸ್ಥಾನ ಸಿಗಬೇಕು ಎನ್ನುವುದು ನಮ್ಮೆಲ್ಲರ ನಿರೀಕ್ಷೆಯಾಗಿದೆ. ಹೈಕಮಾಂಡ್ ಈ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸ ನಮಗಿದೆ” ಎಂದು ರಂಗನಾಥ್ ಹೇಳಿದರು. ಮುಂದುವರಿದು ಮಾತನಾಡಿದ ಅವರು, “ಮೇ 15 ರಂದು ಡಿ.ಕೆ. ಶಿವಕುಮಾರ್ ಅವರ ಜನ್ಮದಿನವಿದೆ. ಅಷ್ಟರೊಳಗೆ ಅವರಿಗೆ ಯಾವುದಾದರೂ ಸಂತೋಷದ ವಿಚಾರ ಅಥವಾ ‘ಸಿಹಿ ಸುದ್ದಿ’ ಬರಬಹುದು ಎಂಬ ಆಶಯ ನಮ್ಮದಾಗಿದೆ” ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.
