ಉದಯವಾಹಿನಿ, ದಾವಣಗೆರೆ: ಆ್ಯಕ್ಸಲ್ ತುಂಡಾಗಿ ಸಾರಿಗೆ ಬಸ್‌ ಪಲ್ಟಿಯಾದ ಘಟನೆ ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 20 ಮಂದಿ ಸ್ಥಿತಿ ಗಂಭೀರವಾಗಿದೆ.
ಅಪಘಾತದಲ್ಲಿ ಸಾವನ್ನಪ್ಪಿದ ಯುವಕನನ್ನು ದರ್ಶನ್ (21) ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆ ಹಾಗೂ ಬಸವಾಪಟ್ಟಣ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ದಾವಣಗೆರೆ ನಗರದ ಶಾಮನೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮೃತರನ್ನು ಗೌತಮ್ ( 29) ಮನೋಜ್ (29) ಎಂದು ಗುರುತಿಸಲಾಗಿದೆ. ಇಬ್ಬರು ಮದುವೆಯೊಂದಕ್ಕೆ ಹೋಗಿ ವಾಪಸ್‌ ಆಗುತ್ತಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ಅತಿ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿವೆ. ಸ್ಥಳಕ್ಕೆ ದಾವಣಗೆರೆ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!