
ಉದಯವಾಹಿನಿ ಕುಶಾಲನಗರ : ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ‘ಮೇರಿ ಮಾಟಿ ಮೇರಿ ದೇಶ್’ (ನನ್ನ ಮಣ್ಣು, ನನ್ನ ದೇಶ) ಎಂಬ ಅಭಿಯಾನದ ಮೂಲಕ ಸಸಿಗಳನ್ನು ನೆಡುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಎಲ್ಲಾ ಹಂತದ ಅಧಿಕಾರಿಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಸಸಿಗಳನ್ನು ನೆಡುವುದು ಮತ್ತು ಪಂಚ್ ಪ್ರಾಣ್ ಪ್ರತಿಜ್ಞೆಯನ್ನು ಬೋಧಿಸುವುದು, ಜೊತೆಗೆ ಸ್ವಾತಂತ್ರö್ಯ ಹೋರಾಟಗಾರರು ಹಾಗೂ ಯೋಧರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕಿದೆ. ಈ ಕಾರ್ಯಕ್ರಮವನ್ನು ಗ್ರಾಮ ಮತ್ತು ತಾಲ್ಲೂಕು ಪಂಚಾಯಿತಿಗಳಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಆಯೋಜಿಸಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ಕಾರ್ಯಕ್ರಮವನ್ನು ಎಲ್ಲಾ ಗ್ರಾ.ಪಂ.ಗಳಲ್ಲಿ ಯಶಸ್ವಿಯಾಗಿ ಆಯೋಜಿಸಲು ತಮ್ಮ ವ್ಯಾಪ್ತಿಯಲ್ಲಿ ಗ್ರಾ.ಪಂ.ಅಧ್ಯಕ್ಷರು ಹಾಗೂ ಸದಸ್ಯರನ್ನು ಆಹ್ವಾನಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಶ್ರಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಪ್ರಶಾಂತ್, ಎಸ್.ಎನ್.ನರಗುಂದ, ಪ್ರಕಾಶ್, ತಾ.ಪಂ.ಇಒಗಳಾದ ಶೇಖರ್, ಅಪ್ಪಣ್ಣ, ಜಯಣ್ಣ, ಪೌರಾಯುಕ್ತರಾದ ವಿಜಯ್, ಪುರಸಭೆ ಮುಖ್ಯಾಧಿಕಾರಿಗಳಾದ ಕೃಷ್ಣ ಪ್ರಸಾದ್, ನಾಚಪ್ಪ ಇತರರು ಇದ್ದರು.
