ಉದಯವಾಹಿನಿ ಕೆ.ಆರ್.ಪೇಟೆ: ತಾಯಂದಿರ ಹಾಗೂ ಮಕ್ಕಳ ಮರಣವನ್ನು ತಡೆಗಟ್ಟಲು ಸೀಮಂತ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಸಿ.ಶಿವಮ್ಮ ಅಭಿಪ್ರಾಯಪಟ್ಟರು.ಅವರು ತಾಲ್ಲೂಕಿನ ಶೀಳನೆರೆ ಹೋಬಳಿಯ ಚನ್ನಾಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಏರ್ಪಡಿಸಿದ್ದ ಸೀಮಂತ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಉತ್ತಮವಾದ ಆಹಾರ ಮತ್ತು ಔಷದೋಪಚಾರ ಕಲ್ಪಸಿದ ಪರಿಣಾಮ ಪ್ರಸಕ್ತ ವರ್ಷ ಶಿಶು ಹಾಗೂ ಗರ್ಭಿಣಿಯರ ಮರಣದ ಪ್ರಮಾಣದಲ್ಲಿ ಇಳಿಕೆ ಕಂಡು ಬರುತ್ತಿದೆ. ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ಕಾಲಕಾಲಕ್ಕೆ ಅಗತ್ಯವಾದ ಪೋಷಕಾಂಶಗಳು, ಔಷಧಿ ಸೇರಿದಂತೆ ಎಲ್ಲಾ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ. ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ಸೊಪ್ಪು, ತರಕಾರಿ ಮೊಟ್ಟೆ, ಮೀನು ಮಾಂಸ ಸೇರಿದಂತೆ ಪೌಷ್ಠಿಕಾಂಶದ ಆಹಾರ ಪದಾರ್ಥಗಳನ್ನು ನೀಡಲು ಪೋಷಕರು ಕ್ರಮ ಕೈಗೊಳ್ಳಬೇಕು. ಇದಕ್ಕೆ ಸಮುದಾಯದ ಎಲ್ಲರ ಸಹಕಾರ ಅಗತ್ಯವಾಗಿದೆ. ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ನಿವಾರಿಸಲು ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದ್ದು ಮನೆಯಲ್ಲಿ ಹಾಗೂ ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು ಮತ್ತು ಗರ್ಭಿಣಿಯರಿಗೆ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳನ್ನು ಒದಗಿಸಲಾಗುತ್ತಿದೆ. ಈ ಕಾರ್ಯಕ್ಕೆ ನಾವು ನೀವೆಲ್ಲರೂ ಸಹಕಾರ ನೀಡಬೇಕು ಎಂದರು.
ಸೀಮAತ ಕಾರ್ಯಕ್ರಮದಲ್ಲಿ ತಾಲೂಕು ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮರುವನಹಳ್ಳಿ ಬಸವರಾಜು, ಆರೋಗ್ಯ ನಿರೀಕ್ಷಕ ಹರಿಕೃಷ್ಣ, ಸಹ ಶಿಕ್ಷಕಿ ಸುಷ್ಮ, ಅಂಗನವಾಡಿ ಕಾರ್ಯಕರ್ತೆ ಬಿ.ಬಿ.ಪ್ರಮೀಳ, ಆಶಾ ಕಾರ್ಯಕರ್ತೆ ಪ್ರಭಾ, ಸೇರಿದಂತೆ ಗ್ರಾಮದ ಮಹಿಳೆಯರು ಹಾಜರಿದ್ದರು.
