ಉದಯವಾಹಿನಿ, ತುಮಕೂರು: ನಮ್ಮ ರಾಷ್ಟ್ರದ ಸಂವಿಧಾನದ ಮೂಲಾಧಾರ ವಾಗಿರುವ ಪ್ರಜಾಪ್ರಭುತ್ವ, ಜಾತ್ಯಾತೀತತೆ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಪ್ರತಿಯೊಬ್ಬ ನಾಗರಿಕರು ಎತ್ತಿ ಹಿಡಿಯ ಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಇಂದಿಲ್ಲಿ ಕರೆ ನೀಡಿದರು.
ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ್ದ 76ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಗೌರವ ರಕ್ಷೆ ಸ್ವೀಕರಿಸಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ, ಜಾತ್ಯಾತೀತೆ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಎತ್ತಿ ಹಿಡಿಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಬ್ರಿಟಿಷರಿಂದ ಸ್ವಾತಂತ್ರ್ಯಗೊಂಡ ನಂತರ ಭಾರತ ದೇಶವು ಹಲವು ಮೈಲಿಗಲ್ಲುಗಳನ್ನು ಕಂಡಿದೆ. ಆರ್ಥಿಕತೆ, ರಾಜಕೀಯ, ತಂತ್ರಜ್ಞಾನ, ವಿಜ್ಞಾನ, ಮೂಲ ಸೌಕರ್ಯಗಳು ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಅನೇದ ಸಾಧನೆಗಳಿಗೆ ಸಾಕ್ಷಿಯಾಗಿದೆ. ಈ ಸಾಧನೆ ಅಭಿವೃದ್ಧಿಗಳ ಸಂಖ್ಯೆ ಸ್ವಾತಂತ್ರ್ಯ ಭಾರತದಲ್ಲಿ ಹೆಚ್ಚುತ್ತಲೇ ಇರುತ್ತದೆಯೇ ಹೊರತು, ಎಂದಿಗೂ ಇದಕ್ಕೆ ಅಂತ್ಯ ಎನ್ನುವುದಿಲ್ಲ ಎಂದು ಅವರು ತಿಳಿಸಿದರು.
ಬ್ರಿಟಿಷರಿಂದ ದಾಸ್ಯದಿಂದ ಮುಕ್ತಿ ಪಡೆದು ಭಾರತ ಸ್ವಾತಂತ್ರ್ಯವಾದ ಈ ಸುದಿನವನ್ನು ಸಾವಿರಾರು ಹೋರಾಟಗಾರರು, ದೇಶ ಪ್ರೇಮಿಗಳು ಹಾಗೂ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಅನೇಕ ಸಾಧಕರು, ಹಿರಿಯರು ಮತ್ತು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
