ಉದಯವಾಹಿನಿ,ಯಾದಗಿರಿ : ಸ್ವಾತಂತ್ರ‍್ಯ ಹೋರಾಟಗಾರರ ತ್ಯಾಗ ಬಲಿದಾನದ ಫಲವಾಗಿ ಸ್ವಾತಂತ್ರ್ಯವನ್ನು ಗಳಿಸಿದ್ದು ಅತ್ಯಮೂಲ್ಯವಾದ ಈ ಸ್ವಾತಂತ್ರ್ಯವನ್ನು ರಕ್ಷಿಸುವ ಸಂಕಲ್ಪ ಮಾಡುವುದರ ಜೊತೆಗೆ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಎಲ್ಲ ಮಹನೀಯರನ್ನು ಈ ದಿನದಂದು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ವಿವಿಧ ಕವಾಯತು ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ, ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಸ್ವಾತಂತ್ರೋತ್ಸದ ಪ್ರತಿಯೊಬ್ಬ ಭಾರತೀಯನ ಪಾಲಿಗೆ ಅತ್ಯಂತ ಮಹತ್ವದ ದಿನ. ಈ ಸಂದರ್ಭದಲ್ಲಿ ನಾನು ಎಲ್ಲ ನಾಗರಿಕರಿಗೂ, ನಾಡಿನ ಎಲ್ಲ ಜನರಿಗೂ ಶುಭಾಶಯ ಕೋರಿದ ಅವರು ಭಾರತದ ಆರ್ಥಿಕ ಸಂಪತ್ತು ಯೂರೋಪಿಯನ್ನರನ್ನು ಆಕರ್ಷಿಸಿ ಬ್ರಿಟೀಷರು, ಫ್ರೆಂಚರು, ಪೋರ್ಚುಗೀಸರು, ಡಚ್ಚರು ಭಾರತದಲ್ಲಿ ಅಧಿಪತ್ಯ ಸ್ಥಾಪಿಸಲು ಪ್ರಯತ್ನಿಸಿದರು. ಅಂತಿಮವಾಗಿ ಇಂಗ್ಲಿಷರು ಅಧಿಪತ್ಯ ಸಾಧಿಸಿ ಸುಮಾರು 200 ವರ್ಷ ಆಡಳಿತ ನಡೆಸಿದರು.ಆ ಸಂದರ್ಭದಲ್ಲಿ ಮೊದಲ ಬಾರಿಗೆ ಭಾರತೀಯರೆಲ್ಲರು 1857 ರಲ್ಲಿ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಮೂಲಕ ತಮ್ಮ ಹೋರಾಟದ ಕಿಚ್ಚನ್ನು ಪ್ರದರ್ಶಿಸಿದ್ದರು.

ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ
” ಸಚಿವರು ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಸನ್ಮಾನಿಸಿದರು. ಅದರಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತಂದಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತ ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ ಕೈಪಿಡಿ ಬಿಡುಗಡೆ ಮಾಡಿದರು. ಆಯುಷ ಮಾನ್ ಭಾರತ ಯೋಜನೆಯಡಿ ವೈದ್ಯರಿಗೆ ಸನ್ಮಾನಿಸಲಾಯಿತು, ರೈತರಿಗೆ ತಾಳೆ ಸಸಿ ವಿತರಿಸಲಾಯಿತು, ಘನತ್ಯಾಜ್ಯ ವಿಲೇವಾರಿ ಘಟಕಗಳ ಮಹಿಳಾ ವಾಹನ ಚಾಲಕರಿಗೆ ಲಘು ವಾಹನ ಪರವಾನಿಗೆ ಪತ್ರ ವಿತರಿಸಲಾಯಿತು”ಈ ಸಂದರ್ಭದಲ್ಲಿ ಯಾದಗಿರಿ ಶಾಸಕ ಚನ್ನರೆಡ್ಡಿ ಪಾಟೀಲ ತುನ್ನೂರ, ವಿಧಾನ ಪರಿಷತ್ ಸದಸ್ಯ ಛಲವಾದಿ ಟಿ.ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಶ್ರೀಮತಿ ಡಾ. ಸುಶೀಲ.ಬಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಗರಿಮಾ ಪನ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶ್ರೀ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಶ್ರೀ ಹಂಪಣ್ಣ ಸಜ್ಜನ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ದೇಶಭಕ್ತಿ, ಸಾಂಸ್ಕೃತಿಕ ನೃತ್ಯ ಪ್ರದರ್ಶನ ಗಮನ ಸೆಳೆಯಿತು. ಪ್ರೋ.ಸುಭಾಷಚಂದ್ರ ಕೌಲಗಿ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

error: Content is protected !!