ಉದಯವಾಹಿನಿ, ಬೆಂಗಳೂರು: ಸಾರ್ವಜನಿಕರ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ತಮ್ಮ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಸೆ.9ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಿದೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪ್ರಧಾನ ನಗರ ಸಿವಿಲ್ ಮತ್ತು ಸತ್ರ ನ್ಯಾಯಾೀಧಿಶರು, ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮುರುಲೀಧರ ಪೈ ಅವರು, ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ತಮ್ಮ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಸಾರ್ವಜನಿಕರಿಗೊಂದು ಸುವರ್ಣ ಅವಕಾಶ ಒದಗಿಸಲಾಗಿದೆ ಎಂದರು.
ಲೋಕ್ ಅದಾಲತ್‍ನಲ್ಲಿ ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ , ವಿದ್ಯುತ್ ಹಾಗೂ ನೀರಿನ ಶುಲ್ಕಗಳು ರಾಜೀಯಾಗಬಲ್ಲ ಅಪರಾಧಿಕ, ವೈವಾಹಿಕ ಮತ್ತು ಇತರೆ ಸಿವಿಲ್ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ಅವರು ಹೇಳಿದರು.
ಸಾಲ ವಸೂಲಾತಿ ನ್ಯಾಯಾೀಧಿಕರಣದ, ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಸಂಬಂಧಿಸಿದ, ಖಾಯಂ ಜನತಾ ನ್ಯಾಯಾಲಯದಲ್ಲಿನ ಹಾಗೂ ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಮತ್ತು ಜಿಲ್ಲಾ ಗ್ರಾಹಕ ವೇದಿಕೆಯಲ್ಲಿನ ಪ್ರಕರಣಗಳು ಇತ್ಯರ್ಥಕ್ಕೆ ಲೋಕ್ ಅದಾಲತ್‍ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.
