ಉದಯವಾಹಿನಿ, ಲಡಾಖ್ : ಚೀನಾ ಭಾರತದ ಒಂದು ಇಂಚು ಭೂಮಿಯನ್ನು ಅತಿಕ್ರಮಿಸಿಕೊಂಡಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬುರುಡೆ ಬಿಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ಆರೋಪಿಸಿದ್ದಾರೆ. ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 79ನೇ ಜನ್ಮದಿನಾಚರಣೆಯ ಪ್ರಯುಕ್ತ ಲಡಾಖ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಚೀನಾದ ಪೀಪಲ್ ಲಿಬರೇಷನ್ ಆರ್ಮಿಯು ಭಾರತದ ಒಂದು ಇಂಚು ಭೂಮಿಯನ್ನು ವಶಪಡಿಸಿಕೊಂಡಿಲ್ಲ ಎಂದು ಹೇಳಿರುವುದು ಶುದ್ಧ ಸುಳ್ಳು ಎಂದಿದ್ದಾರೆ.
ಚೀನಾ ನಮ್ಮ ಭೂಮಿಯನ್ನು ವಶಪಡಿಸಿಕೊಳ್ಳುವ ಬಗ್ಗೆ ಇಲ್ಲಿನ ಸ್ಥಳೀಯರು ಕಳವಳ ವ್ಯಕ್ತಪಡಿಸಿದ್ದಾರೆ. ಸೈನಿಕರು ಅವರ ಗೋಮಾಳ ಭೂಮಿಯನ್ನು ಕಸಿದುಕೊಂಡಿದ್ದಾರೆ, ಆದರೆ, ಒಂದು ಇಂಚು ಭೂಮಿಯನ್ನು ಕಿತ್ತುಕೊಂಡಿಲ್ಲ ಎಂದು ಪ್ರಧಾನಿ ಹೇಳುತ್ತಾರೆ, ಇದು ನಿಜವಲ್ಲ, ನೀವು ಇಲ್ಲಿ ಯಾರನ್ನಾದರೂ ಕೇಳಬಹುದು ಎಂದು ರಾಹುಲ್ ಗಾಂಧಿ ಹೇಳಿದರು.
